ಕರ್ನಾಟಕ

karnataka

ETV Bharat / state

ಬಿಜೆಪಿ ವಿರುದ್ಧ ಜಾಹೀರಾತು: ರಾಹುಲ್ ಗಾಂಧಿ ವಿರುದ್ಧದ ಮಾನಹಾನಿ ಪ್ರಕರಣಕ್ಕೆ ಹೈಕೋರ್ಟ್ ತಡೆ - DEFAMATION CASE

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿರುವ ಮಾನಹಾನಿ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

HIGH COURT STAYS DEFAMATION CASE
ಹೈಕೋರ್ಟ್ (ETV Bharat)

By ETV Bharat Karnataka Team

Published : Jan 17, 2025, 6:00 PM IST

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದ ದಿನ ಪತ್ರಿಕೆಗಳ ಮುಖಪುಟದಲ್ಲಿ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಸರಣಿ ಆರೋಪಗಳನ್ನು ಮಾಡಿ ಜಾಹೀರಾತು ನೀಡಿದ್ದನ್ನು ಆಕ್ಷೇಪಿಸಿ ಲೋಕಸಭಾ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿರುವ ಮಾನಹಾನಿ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಬಿಜೆಪಿ ಹೂಡಿರುವ ಮಾನಹಾನಿ ಪ್ರಕರಣ ರದ್ದುಪಡಿಸುವಂತೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ನೀಡಿ ವಿಚಾರಣೆಯನ್ನು ಮುಂದೂಡಿದೆ. ರಾಹುಲ್ ಗಾಂಧಿ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕೆ ಶಶಿಕಿರಣ್ ಶೆಟ್ಟಿ, ಬಿಜೆಪಿಯು (ಜಾಹೀರಾತನ್ನು) ತಪ್ಪಾಗಿ ಅರ್ಥೈಸಿದೆ. ಹೀಗಾಗಿ ಅವರ ವಿರುದ್ದದ ಮಾನ ಹಾನಿ ಪ್ರಕರಣದ ವಿಚಾರಣೆ ಮುಂದುವರೆಸುವುದಕ್ಕೆ ಅವಕಾಶ ನೀಡಬಾರದು ಎಂದು ಪೀಠಕ್ಕೆ ವಿವರಿಸಿದರು.

ಇದನ್ನು ಆಲಿಸಿದ ಪೀಠ, ರಾಹುಲ್ ಗಾಂಧಿ ಅವರ ವಿರುದ್ಧದ ನ್ಯಾಯಾಂಗ ಪ್ರಕ್ರಿಯೆಗೆ ಮಧ್ಯಂತರ ತಡೆಯಾಜ್ಞೆ ವಿಧಿಸಲಾಗಿದೆ. ಪ್ರತಿವಾದಿಗೆ ತುರ್ತು ನೋಟಿಸ್ ಜಾರಿ ಮಾಡಲಾಗಿದೆ ಎಂದು ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿತು.

ಇದೇ ಆರೋಪ ಸಂಬಂಧ 2023ರ ಜೂನ್‌ನಲ್ಲಿ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಐಪಿಸಿ ಸೆಕ್ಷನ್‌ಗಳಾದ 499 ಮತ್ತು 500ರ ಅಡಿ ಕಾಂಗ್ರೆಸ್, ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ಅವರ ವಿರುದ್ಧ ಸಂಜ್ಞೇ ಪರಿಗಣಿಸಿತ್ತು. ಇದಾದ ನಡುವೆ ರಾಹುಲ್, ಸಿದ್ದರಾಮಯ್ಯ ಹಾಗೂ ಡಿಕೆ. ಶಿವಕುಮಾರ್ ವಿಚಾರಣೆಗೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದರು.

ಪ್ರಕರಣದ ಹಿನ್ನೆಲೆ:ಬಿಜೆಪಿಯ ವಿರುದ್ಧ ಆಧಾರರಹಿತ, ಅತಾರ್ಕಿಕ ಮತ್ತು ಸುಳ್ಳು ಜಾಹೀರಾತನ್ನು ಪತ್ರಿಕೆಗಳ ಮುಖಪುಟದಲ್ಲಿ ನೀಡುವ ಮೂಲಕ ಆರೋಪಿಗಳು ಮಾನಹಾನಿ ಮಾಡುವುದಲ್ಲದೇ ನಕಲಿ ಆರೋಪಗಳನ್ನು ಮಾಡಿದ್ದಾರೆ. ಆಕ್ಷೇಪಾರ್ಹ ಜಾಹೀರಾತಿನಲ್ಲಿ ಭ್ರಷ್ಟಾಚಾರ ದರ ಪಟ್ಟಿ ಅಡಿಯಲ್ಲಿ ಹಲವು ಸುಳ್ಳುಗಳನ್ನು ಸೇರಿಸಲಾಗಿದೆ. ಆರೋಪಿಗಳು ತಮಗೆ ಸರಿ ಎನಿಸಿದ್ದನ್ನು ಆರೋಪಿಸಿ ಜಾಹೀರಾತಿನಲ್ಲಿ ವಿವರಿಸಲಾಗಿತ್ತು.

ಕೆಎಸ್‌ಡಿಎಲ್‌ನಲ್ಲಿ ಹುದ್ದೆಗೆ 5-15 ಕೋಟಿ ರೂಪಾಯಿ, ಎಂಜಿನಿಯರ್ ಹುದ್ದೆಗೆ 1-5 ಕೋಟಿ, ಉಪ - ನೋಂದಣಾಧಿಕಾರಿ ಹುದ್ದೆಗೆ 50 ಲಕ್ಷದಿಂದ 5 ಕೋಟಿ, ಬೆಸ್ಕಾಂನಲ್ಲಿನ ಹುದ್ದೆಗೆ 1 ಕೋಟಿ, ಪಿಎಸ್ ಹುದ್ದೆಗೆ 80 ಲಕ್ಷ, ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ 50 - 70 ಲಕ್ಷ, ಪ್ರಾಧ್ಯಾಪಕರ ಹುದ್ದೆಗೆ 30-50 ಲಕ್ಷ, ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ 30 ಲಕ್ಷ, ಅಂತೆಯೇ ಕಿರಿಯ ಎಂಜಿನಿಯರ್, ಬಮೂಲ್, ಲೋಕೋಪಯೋಗಿ ಕಿರಿಯ ಎಂಜಿನಿಯರ್, ಪೇದೆಗಳ ಹುದ್ದೆಗೆ ಲಂಚ ನಿಗದಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದರು.

ಬಿಡಿಎ ಆಯುಕ್ತರು, ಕೆಪಿಎಸ್‌ಸಿ ಅಧ್ಯಕ್ಷರು, ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ, ಕುಲಪತಿ, ಸಹಾಯಕ ಆಯುಕ್ತರು ಮತ್ತು ತಹಶೀಲ್ದಾರ್ ಹುದ್ದೆಗಳಿಗೂ ಲಂಚದ ದರ ನಿಗದಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಆರೋಪಿಗಳು ಬಹಿರಂಗವಾಗಿ ಜಾಹೀರಾತಿನ ಮೂಲಕ ಹೇಳಿರುವುದರಿಂದ ಇದು ಕ್ರಿಮಿನಲ್ ಮಾನಹಾನಿಯಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಜತೆಗೆ, ಕೋವಿಡ್ ಸಂಬಂಧಿತ ಸಾಮಗ್ರಿಗಳ ಪೂರೈಕೆ ಮತ್ತು ಖರೀದಿಯಲ್ಲಿ ಶೇ. 70ರಷ್ಟು ಕಮೀಷನ್ ಪಡೆಯಲಾಗಿದೆ. ಲೋಕೋಪಯೋಗಿ ಇಲಾಖೆಯ ಗುತ್ತಿಗೆ, ರಸ್ತೆ ನಿರ್ಮಾಣದಲ್ಲಿ 70:30ರಷ್ಟು ಲಂಚ ಪಡೆಯಲಾಗಿದೆ ಎಂದು ದೂರಿದ್ದಾರೆ. ಅಲ್ಲದೇ, ಶೇ. 40ರ ಸರ್ಕಾರವು 1.50 ಲಕ್ಷ ಕೋಟಿ ರೂಪಾಯಿ ಲೂಟಿ ಮಾಡಿದೆ ಎಂದು ಉಲ್ಲೇಖಿಸಲಾಗಿದೆ. ಇದನ್ನ ವಿರೋಧಿಸಿ ರಾಹುಲ್ ಮತ್ತಿತರರ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂ ಓದಿ: 'ರಾಜಕೀಯ ಪಕ್ಷಗಳ ವಿರುದ್ಧವೂ ಮಾನಹಾನಿ ಪ್ರಕರಣ': ರಾಜಕಾರಣಿಗಳ ಪ್ರಕರಣಗಳ ಬಗ್ಗೆ 2024ರಲ್ಲಿ ಹೈಕೋರ್ಟ್​ ಆದೇಶಗಳು - HIGH COURT ORDERS IN 2024

ABOUT THE AUTHOR

...view details