ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನೀರಿನ ಅಭಾವ ಉಂಟಾದ ಹಿನ್ನೆಲೆಯಲ್ಲಿ ನೀರು ಪೋಲಾಗುವುದನ್ನು ತಡೆಯಲು ಜಲಮಂಡಳಿ ಮುಂದಾಗಿ ಏರಿಯೇಟರ್ ಅಳವಡಿಸಿಕೊಳ್ಳುವಂತೆ ಸೂಚಿಸಿತ್ತು. ಇದೀಗ ಏರಿಯೇಟರ್ ಅಳವಡಿಕೆಯ ಗಡುವು ಮೇ 7 ರವರೆಗೆ ವಿಸ್ತರಿಸಲಾಗಿದೆ. ಏರಿಯೇಟರ್ ಅಳವಡಿಸಿಕೊಳ್ಳದವರಿಗೆ ಮೇ 8 ರಿಂದ ದಂಡ ಹಾಕಲಾಗುವುದು ಎಂದು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಹೇಳಿದ್ದಾರೆ.
ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ನೀರು ಉಳಿತಾಯ ಹಾಗೂ ನೀರಿನ ಸದ್ಬಳಕೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಮಾಲ್‌ಗಳಲ್ಲಿ, ವಾಣಿಜ್ಯ ಸಂಕೀರ್ಣಗಳಲ್ಲಿ, ಅಪಾರ್ಟ್‌ಮೆಂಟ್‌ಗಳಲ್ಲಿ, ಸರ್ಕಾರಿ ಕಟ್ಟಡಗಳಲ್ಲಿ, ಐಷಾರಾಮಿ ಹೊಟೇಲ್‌ಗಳಲ್ಲಿ, ರೆಸ್ಟೋರೆಂಟ್‌ಗಳಲ್ಲಿ ಹಾಗೂ ಧಾರ್ಮಿಕ ಸ್ಥಳಗಳನ್ನೊಳಗೊಂಡ ಸಾರ್ವಜನಿಕ ಪ್ರದೇಶಗಳಲ್ಲಿ ಸ್ವಚ್ಛತೆಗಾಗಿ ಬಳಸುವ ನಲ್ಲಿಗಳಲ್ಲಿ ಕಡ್ಡಾಯವಾಗಿ ಏರಿಯೇಟರ್(ಫ್ಲೋ ರಿಸ್ಟ್ರಿಕ್ಟರ್) ಅಳವಡಿಸಿಕೊಳ್ಳಲು ಏಪ್ರಿಲ್ವರೆಗೆ ಅವಕಾಶ ನೀಡಲಾಗಿತ್ತು. ಆದರೆ, ಸಾರ್ವಜನಿಕರು ಈ ಗಡುವನ್ನು ವಿಸ್ತರಿಸುವಂತೆ ಕೋರಿದ ಹಿನ್ನೆಲೆ ಮೇ 7 ರವರೆಗೆ ಅವಕಾಶ ವಿಸ್ತರಿಸಲಾಗಿದೆ ಎಂದಿದ್ದಾರೆ.
ಈಗಾಗಲೇ ನಗರದಾದ್ಯಂತ ಬಹಳಷ್ಟು ಕಡೆಗಳಲ್ಲಿ ಸುಮಾರು 6 ಲಕ್ಷಕ್ಕೂ ಹೆಚ್ಚು ಏರಿಯೇಟರ್‌ಗಳನ್ನು ಅಳವಡಿಸಿಕೊಳ್ಳಲಾಗಿದೆ. ಮಾಲ್, ವಾಣಿಜ್ಯ ಸಂಕೀರ್ಣ, ಅಪಾರ್ಟ್‌ಮೆಂಟ್, ಸರ್ಕಾರಿ ಕಟ್ಟಡ, ಐಷಾರಾಮಿ ಹೊಟೇಲ್, ರೆಸ್ಟೋರೆಂಟ್ ಹಾಗೂ ಧಾರ್ಮಿಕ ಸ್ಥಳಗಳನ್ನೊಳಗೊಂಡ ಸಾರ್ವಜನಿಕ ಪ್ರದೇಶಗಳಲ್ಲಿ. ಮೇ 7 ರ ಒಳಗಾಗಿ ಏರಿಯೇಟರ್/ಫ್ಲೋ ರಿಸ್ಟ್ರಿಕ್ಟರ್ ಅಳವಡಿಸಿಕೊಳ್ಳದೇ ಇದ್ದಲ್ಲಿ ಮೇ 8 ರ ನಂತರ ಜಲಮಂಡಳಿ ಅಧಿಕಾರಿಗಳು ಪರಿಶೀಲನೆ ನಡೆಸಿ ದಂಡ ವಿಧಿಸಲಿದ್ದಾರೆ ಎಂದು ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಇದನ್ನೂ ಓದಿ:ಬಿಸಿಲಿನ ಝಳಕ್ಕೆ ಬೆಂಡಾದ ಬೆಂಗಳೂರಿಗರು: ರಾಜ್ಯಾದ್ಯಂತ ಇನ್ನೂ ಒಂದು ವಾರ ಬಿಸಿ ಗಾಳಿ - Heatwave In Karnataka