ವಿಶೇಷ ವರದಿ - ಮುನೇಗೌಡ ಎಂ
ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಆನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ ಒದಗಿಸಲು ಸರ್ಕಾರ ಪೋಡಿ ಅಭಿಯಾನ ಆರಂಭಿಸಿದೆ.
ಸಾಗುವಳಿ ಮಾಡುವ ರೈತರಿಗೆ ಮಂಜೂರು ಮಾಡಿರುವ ಲಕ್ಷಾಂತರ ಪ್ರಕರಣಗಳಲ್ಲಿ ಹಲವು ವರ್ಷಗಳಿಂದ ಪೋಡಿ ದುರಸ್ತಿಯಾಗಿಲ್ಲ. ಈ ಹಿಂದಿನ ಸರ್ಕಾರದ ಅವಧಿಯಲ್ಲೂ ಹಲವು ಚರ್ಚೆ, ನಾನಾ ಪ್ರಯತ್ನಗಳಾಗಿದ್ದರೂ ಈ ವಿಚಾರದಲ್ಲಿ ಸರಿಯಾದ ಪರಿಹಾರ ನೀಡಲು ಸಾಧ್ಯವಾಗಿರಲಿಲ್ಲ. ರಾಜ್ಯದಲ್ಲಿ ಸುಮಾರು 10 ಲಕ್ಷ ರೈತರಿಗೆ ದಶಕಗಳ ಹಿಂದೆ ಮಂಜೂರಾಗಿದ್ದ ಸರ್ಕಾರಿ ಜಮೀನು ಸಹ, ಪೋಡಿ ದುರಸ್ತಿ ಆಗದೆ ಬಾಕಿ ಉಳಿದಿದೆ. ರೈತರಿಗೆ ಅವರ ಜಮೀನಿನ ಹಕ್ಕನ್ನು ಸಂಪೂರ್ಣವಾಗಿ ಅವರಿಗೇ ನೀಡಲು, ಈ ವಿಚಾರದಲ್ಲಿ ಶಾಶ್ವತ ಪರಿಹಾರ ನೀಡಲು ರಾಜ್ಯ ಸರ್ಕಾರ ಸಂಕಲ್ಪ ತೊಟ್ಟಿದೆ. 2024 ರ ಸೆಪ್ಟಂಬರ್ ತಿಂಗಳಿಂದಲೇ ಪೋಡಿ ಅಭಿಯಾನಕ್ಕೆ ಸರ್ಕಾರ ಚಾಲನೆ ನೀಡಿದೆ.
ರೈತರಿಗೆ ಜಮೀನು ಮಂಜೂರಾಗಿದ್ದರೂ ಪೋಡಿ ದುರಸ್ತಿಯಾಗದಿರಲು ಪ್ರಮುಖ ಕಾರಣಗಳಿವೆ. ದಶಕಗಳ ಹಿಂದಿನಿಂದಲೂ ಅಧಿಕಾರಿಗಳು ನೂರು ಎಕರೆ ಜಮೀನಿದ್ದರೆ ಅದಕ್ಕಿಂತ ಹೆಚ್ಚು ವಿಸ್ತೀರ್ಣ ಮಂಜೂರು ಮಾಡಿದ್ದಾರೆ. ಇದೊಂದು ಕಾರಣವಾದರೆ, ಕೆಲವು ಸಂದರ್ಭದಲ್ಲಿ ಸಾಗುವಳಿ ಮಾಡದಂತವರಿಗೂ ಮಂಜೂರು ಮಾಡಿದ್ದಾರೆ. ಇನ್ನೂ ಕೆಲವು ಪ್ರಕರಣಗಳಲ್ಲಿ ಆರ್‌ಟಿಸಿಯಲ್ಲಿ ಮಂಜೂರುದಾರರ ಹೆಸರಿದೆ. ಆದರೆ, ಅವರಿಗೆ ಮಂಜೂರು ಆಗಿರುವ ಬಗ್ಗೆ ಯಾವುದೇ ನಿಖರ ದಾಖಲೆಗಳಿಲ್ಲ. ಮತ್ತಷ್ಟು ಪ್ರಕರಣಗಳಲ್ಲಿ ಮಂಜೂರಿಗೆ ಅರ್ಜಿ ಕೊಟ್ಟಿರುವ ದಾಖಲೆ ಇದೆ. ಆದರೆ, ಮಂಜೂರು ಆಗಿರುವ ದಾಖಲೆ ಇಲ್ಲ. ಈ ಎರಡು ಪ್ರಮುಖ ಕಾರಣಗಳಿಂದ ಜಮೀನು ಮಂಜೂರಾಗಿದ್ದರೂ ದುರಸ್ತಿಯಾಗಿಲ್ಲ. ಹೀಗಾಗಿ ರೈತರು ಅಂತಹ ಜಮೀನಿನಲ್ಲಿ ಕೃಷಿ ಮಾಡಬಹುದೇ ವಿನಃ ಅವರಿಗೆ ಆ ಭೂಮಿಯಿಂದ ಬೇರೆ ಯಾವುದೇ ಪ್ರಯೋಜನ ಇಲ್ಲ.
ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ಸಚಿವರ ಒತ್ತಡ ಇದೆ. ರೈತರಿಂದಲೂ ಸಾಕಷ್ಟು ಒತ್ತಡವಿದ್ದ ಕಾರಣ, ಅಧಿಕಾರಿಗಳ ಜೊತೆ ನಿರಂತರ ಚರ್ಚೆ ನಡೆಸಿದ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮುಂದಾಗಿದ್ದಾರೆ. ಯಾರಿಗೆ ಪೋಡಿ ಮಾಡಿಕೊಡಲು ಸಾಧ್ಯವೋ ಅವರಿಗೆಲ್ಲಾ ಪೋಡಿ ಮಾಡಿಕೊಡಲು ತೀರ್ಮಾನಿಸಿದ್ದಾರೆ.
'ಅರ್ಜಿ ಸಲ್ಲಿಸದಿದ್ದರೂ, ಗ್ರಾಮಗಳ ಎಲ್ಲ ಆಸ್ತಿಗಳ ಭೂಮಾಪನ ನಡೆಸಿ ಪೋಡಿ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರತಿ ಗ್ರಾಮಕ್ಕೆ ನಾಲ್ವರು ಭೂ ಮಾಪಕರನ್ನು ನಿಯೋಜಿಸಲಾಗಿದೆ. ಭೂ ದಾಖಲೆಗಳಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ' ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಗ್ರಾಮೀಣ ಭಾಗದ ಎಷ್ಟೋ ಜನರಿಗೆ ಪೋಡಿ ಎಂದರೆ ಏನು?, ಪೋಡಿ ಮಾಡಿಸುವುದರಿಂದ ಸಿಗುವ ಅನುಕೂಲಗಳೇನು? ಎಂಬುದರ ಬಗ್ಗೆ ಸರಿಯಾದ ಮಾಹಿತಿ ಇರುವುದಿಲ್ಲ. ಪೋಡಿ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.