ಬೆಂಗಳೂರು:ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧದ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ತನ್ನ ವಿರುದ್ಧ ದಾಖಲಿಸಲಾಗಿರುವ ದೋಷಾರೋಪ ಪಟ್ಟಿ ರದ್ದುಪಡಿಸಬೇಕು ಎಂದು ಕೋರಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ಮನವಿ ಆಲಿಸಿದ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವಾದ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ಸಲ್ಲಿಸಲಾಗಿರುವ ದೋಷಾರೋಪ ಪಟ್ಟಿಯ ಮುಂದಿನ ವಿಚಾರಣಾ ಪ್ರಕ್ರಿಯೆಗೆ ಮಧ್ಯಂತರ ತಡೆ ನೀಡಿತು.
ಪ್ರಕರಣದ ಹಿನ್ನೆಲೆ ಏನು?:ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನವಲಗುಂದದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಕಾರ್ಯಕ್ರಮಕ್ಕೆ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದಿಲ್ಲ. ಜಮೀರ್ ಅಹ್ಮದ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಾರಿಯಲ್ಲಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ 2018ರ ಮೇ 5 ರಂದು ಚುನಾವಣಾ ಅಧಿಕಾರಿಗಳು ದೂರು ದಾಖಲಿಸಿದ್ದರು. ಅದರಂತೆ ಜಮೀರ್ ಅಹ್ಮದ್ ವಿರುದ್ಧ ತನಿಖೆ ನಡೆಸಿದ್ದ ಪೊಲೀಸರು ಭಾರತೀಯ ದಂಡ ಸಂಹಿತೆ 1860 ರ ಕಲಂ 171 (ಎಚ್) ಮತ್ತು 34ನೇ ಅಡಿ 42ನೇ ಎಸಿಎಂಎಂನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಇದನ್ನೂ ಓದಿ:ರಾಜ್ಯಾಧ್ಯಕ್ಷ, ವಿಪಕ್ಷ ನಾಯಕರ ನಡುವೆ ತಾಳ ಮೇಳವಿರಲಿಲ್ಲ, ಅಧಿವೇಶನದಲ್ಲಿ ಬಿಜೆಪಿ ವಿಫಲ: ಸ್ವಪಕ್ಷದ ವಿರುದ್ಧ ಲಿಂಬಾವಳಿ ಆರೋಪ - LIMBAVALI ATTACK ON OWN PARTY