ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರದ ಉಪ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಪೊಲೀಸರು ಕಿರುಕುಳ ನೀಡುತ್ತಿದ್ದು, ನಾನು ಕೋರ್ಟ್ ಹಾಲ್ ಬಿಟ್ಟು ಹೋಗುವುದಿಲ್ಲ. ನನ್ನನ್ನು ಕಾಪಾಡಿ ಎಂದು ಕೆಪಿಟಿಸಿಎಲ್ ಇಂಜಿನಿಯರ್ ಒಬ್ಬರು ನ್ಯಾಯಮೂರ್ತಿಗಳ ಮುಂದೆ ಪರಿ ಪರಿಯಾಗಿ ಬೇಡಿಕೊಂಡ ಘಟನೆ ಮಂಗಳವಾರ ಹೈಕೋರ್ಟ್‌ನಲ್ಲಿ ನಡೆದಿದೆ.
ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ನ್ಯಾಯಪೀಠದಲ್ಲಿ ಬೆಳಗಿನ ಕಲಾಪ ಮುಗಿದು ಇನ್ನೇನು ಊಟಕ್ಕೆ ತೆರಳಬೇಕು ಎಂದು ಸಿದ್ಧರಾದರು. ಆಗ ಕೋರ್ಟ್ ಮುಂದೆ ಕೈಮುಗಿದು ಹಾಜರಾದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ಸಹಾಯಕ ಇಂಜಿನಿಯರ್ ಆಗಿರುವ ಎಂ.ಜಿ. ಶಾಂತಕುಮಾರ ಸ್ವಾಮಿ, ನನಗೆ ವಿವಾಹ ನಿಶ್ಚಯವಾಗಿ ರದ್ದಾಗಿತ್ತು. ಆನಂತರ ಸುಳ್ಳು ಪ್ರಕರಣ ದಾಖಲಿಸಿ, ನನ್ನಿಂದ ಹಣ ಪಡೆಯಲು ಸ್ಥಳೀಯ ಕಾಂಗ್ರೆಸ್ ಶಾಸಕರು ಮತ್ತು ಪೊಲೀಸರು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅದನ್ನು ರೆಕಾರ್ಡ್ ಮಾಡಿ, ನಾನು ಲೋಕಾಯುಕ್ತಕ್ಕೆ ದೂರು ನೀಡಿದ್ದೆ. ಲೋಕಾಯುಕ್ತಕ್ಕೆ ದೂರು ನೀಡಿದ್ದೀಯಾ ಎಂದು ಸಾಗರದಲ್ಲಿ ಇರಲು ನನ್ನನ್ನು ಬಿಡುತ್ತಿಲ್ಲ. ನಾನು ಅಲ್ಲಿಂದ ಬೆಂಗಳೂರಿಗೆ ವರ್ಗಾವಣೆ ಕೋರುತ್ತಿದ್ದೇನೆ. ಆದು ಆಗಿಲ್ಲ, ಹಾಗಾಗಿ ನನಗೆ ರಕ್ಷಣೆ ನೀಡಬೇಕು ಎಂದು ಕೋರಿದರು.
ಅಲ್ಲದೆ, ಸಾಗರದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳ ರದ್ದತಿ ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯು ಜು.22 ರಂದು ಹೈಕೋರ್ಟ್‌ನಲ್ಲಿ ನಿಮ್ಮ ಪೀಠದ ಮುಂದೆಯೇ ನಡೆದಿತ್ತು. ಪಾರ್ಟಿ ಇನ್ ಪರ್ಸನ್ ಆಗಿ ಈ ಪ್ರಕರಣಗಳಲ್ಲಿ ವಿಚಾರಣೆಯಲ್ಲಿ ಭಾಗಿಯಾಗಿದ್ದು, ವಕೀಲರನ್ನು ನೇಮಿಸಿಕೊಳ್ಳುವುದಾಗಿ ತಿಳಿಸಿದ್ದರಿಂದ, ಹೊಸದಾಗಿ ಅರ್ಜಿ ಸಲ್ಲಿಸಲು ಸ್ವಾತಂತ್ರ್ಯ ಕಲ್ಪಿಸಿ ಅರ್ಜಿ ವಿಲೇವಾರಿ ಮಾಡಲಾಗಿತ್ತು. ಈ ಸಂಬಂಧ ಯೂಟ್ಯೂಬ್‌ನಲ್ಲಿನ ಲೈವ್ ಸ್ಟ್ರೀಮ್ ವಿಡಿಯೋ ಆಧರಿಸಿ, ತಕ್ಷಣ ಸುಳ್ಳು ಗಾಂಜಾ ಪ್ರಕರಣದಲ್ಲಿ ನನ್ನನ್ನು ಬಂಧಿಸಿ ಶಿವಮೊಗ್ಗ ಜೈಲಿಗೆ ಕಳುಹಿಸಿದ್ದರು ಎಂದು ವಿವರಿಸಿದರು.
ಅಲ್ಲದೆ, ಹೈಕೋರ್ಟ್‌ನಲ್ಲಿ ಪೊಲೀಸರ ಬಗ್ಗೆ ದೂರುತ್ತೀಯಾ? ಎಂದು ಸಾಗರದ ಡಿವೈಎಸ್‌ಪಿ ನನ್ನನ್ನು ದಂಡಿಸಿದ್ದಾರೆ. ಗಾಂಜಾ ಪ್ರಕರಣದ ಜೊತೆಗೆ ಬೇರೆ ಬೇರೆ ಸೆಕ್ಷನ್ ಅನ್ವಯಿಸಿದ್ದಾರೆ. ರಿವಾಲ್ವಾರ್ ಇಟ್ಟು ಎನ್‌ಕೌಂಟರ್ ಮಾಡಲಾಗುವುದು ಎಂದು ಹೇಳಿದ್ದಾರೆ. ರೌಡಿಶೀಟರ್ ತೆರೆಯಲಾಗುವುದು ಎಂದು ಬೆದರಿಕೆಯೊಡ್ಡಿದ್ದಾರೆ. ಮೊಬೈಲ್ ಮತ್ತು ಪರ್ಸ್ ಕಸಿದುಕೊಂಡಿದ್ದಾರೆ ಎಂದು ತಿಳಿಸಿ ಕಣ್ಣೀರು ಹಾಕಿದರು.