ಬೆಂಗಳೂರು: 2024 ಮುಗಿದು ಇನ್ನೇನು 2025ರ ಹೊಸ ವರ್ಷದ ಹೊಸ್ತಿಲಲ್ಲಿದ್ದೇವೆ. ಈ ವರ್ಷ ಲೋಕಸಭೆ ಚುನಾವಣೆ, ಪಕ್ಷಾಂತರಗಳು, ಮೈತ್ರಿ ರಾಜಕೀಯ, ಉಪ ಚುನಾವಣೆಯ ಫಲಿತಾಂಶ, ಬಣ ಬಡಿದಾಟ, ಬಂಡಾಯ ಹೀಗೆ ಹಲವು ವಿದ್ಯಮಾನಗಳಿಗೆ ರಾಜ್ಯ ಸಾಕ್ಷಿಯಾಗಿದೆ. ಅವುಗಳನ್ನು ಸಂಕ್ಷಿಪ್ತವಾಗಿ ನೋಡೋಣ.
ಲೋಕಸಭೆ ಚುನಾವಣೆ:ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿದ್ದ ಆಡಳಿತಾರೂಢ ಕಾಂಗ್ರೆಸ್, ವರ್ಷದ ಬಳಿಕ ನಡೆದ ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿತು. ಬಿಜೆಪಿ 17 ಕ್ಷೇತ್ರಗಳಲ್ಲಿ ಗೆದ್ದರೆ ಜೆಡಿಎಸ್ 2, ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ ಗೆಲುವು ಕಂಡಿತು. ಕಳೆದ ಲೋಕಸಭೆ ಚುನಾವಣೆಗೆ ಹೋಲಿಸಿದರೆ ಕಾಂಗ್ರೆಸ್ ತನ್ನ ಗೆಲುವಿನ ಸಂಖ್ಯೆ ಹೆಚ್ಚಿಸಿಕೊಂಡಿದೆ. ಆದರೆ, ವಿಧಾನಸಭೆ ಚುನಾವಣೆಯ ಯಶಸ್ಸನ್ನು ಪುನಾರಾವರ್ತಿಸಲು ಸಾಧ್ಯವಾಗಲಿಲ್ಲ. ಬೆಂಗಳೂರು ಗ್ರಾಮಾಂತರ ಕ್ಷೇತ್ರ ಕುತೂಹಲ ಕೆರಳಿಸಿತ್ತು. ಡಿಸಿಎಂ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಸೋಲುವ ಮೂಲಕ ಅಚ್ಚರಿಯ ಫಲಿತಾಂಶ ಹೊರಬಂದಿತ್ತು. ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಡಿ.ಕೆ.ಸುರೇಶ್ ಅವರನ್ನು ಸೋಲಿಸಿ ಕಾಂಗ್ರೆಸ್ಗೆ ದೊಡ್ಡ ಶಾಕ್ ಕೊಟ್ಟರು. ಮತ್ತೊಂದು ಹೈ ಪ್ರೊಫೈಲ್ ಕ್ಷೇತ್ರ ಮಂಡ್ಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಗೆದ್ದರು.
ಬಿಜೆಪಿ-ಜೆಡಿಎಸ್ ಮೈತ್ರಿ ರಾಜಕೀಯ:ಲೋಕಸಭೆ ಚುನಾವಣೆಗೆ ಮುನ್ನ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿ ರಾಜ್ಯ ರಾಜಕೀಯದ ದೊಡ್ಡ ವಿದ್ಯಮಾನ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಅಖಾಡಕ್ಕಿಳಿದಿದ್ದವು. ಆ ಮೂಲಕ ರಾಜ್ಯದಲ್ಲಿನ ಆಡಳಿತಾರೂಢ ಕಾಂಗ್ರೆಸ್ಗೆ ಪ್ರಬಲ ಪೈಪೋಟಿ ನೀಡಿತು. 2019ರ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರೆ, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿತು. ದೀರ್ಘಕಾಲದ ಮೈತ್ರಿಯ ಉದ್ದೇಶದೊಂದಿಗೆ ಜೆಡಿಎಸ್ ಹಾಗೂ ಬಿಜೆಪಿ ರಾಜ್ಯದಲ್ಲಿ ದೋಸ್ತಿ ಮಾಡಿಕೊಂಡಿದೆ. ಈ ಮೈತ್ರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ಗೆ ಉತ್ತಮ ಫಲಿತಾಂಶ ನೀಡಿತು. ಗ್ಯಾರಂಟಿಗಳ ಜನಪ್ರಿಯತೆ ಮಧ್ಯೆ ಆಡಳಿತಾರೂಢ ಕಾಂಗ್ರೆಸ್ ಅನ್ನು ರಾಜ್ಯದಲ್ಲಿ ಒಂದಂಕಿಗೆ ಕಟ್ಟಿಹಾಕುವಲ್ಲಿ ಮೈತ್ರಿ ಯಶಕಂಡಿತು.
ಪಕ್ಷಾಂತರ ರಾಜಕೀಯ:2023ರ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದ ಸಿಟ್ಟಿನಲ್ಲಿ ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್, 2024ರಲ್ಲಿ ಮತ್ತೆ ಮಾತೃಪಕ್ಷ ಬಿಜೆಪಿಗೆ ಮರಳಿ, ಬೆಳಗಾವಿ ಲೋಕಸಭೆ ಕ್ಷೇತ್ರದಿಂದ ಗೆದ್ದರು. ಇತ್ತ ತುಮಕೂರು ಕ್ಷೇತ್ರದಿಂದ ಟಿಕೆಟ್ ಕೈ ತಪ್ಪಿದ್ದರಿಂದ ಮುದ್ದಹನುಮೇಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಆದರೆ, ಚುನಾವಣೆಯಲ್ಲಿ ಕ್ಷೇತ್ರದ ಜನರು ಅವರ ಕೈ ಹಿಡಿಯಲಿಲ್ಲ. ಕೊಪ್ಪಳದ ಮಾಜಿ ಸಂಸದ ಕರಡಿ ಸಂಗಣ್ಣಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಕಾರಣ ಕಾಂಗ್ರೆಸ್ ಸೇರಿದ್ದರು. ಅದೇ ರೀತಿ ಜಯಪ್ರಕಾಶ್ ಹೆಗ್ಡೆ ಟಿಕೆಟ್ ಸಿಗದೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕೈ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಇತ್ತೀಚೆಗೆ ಸಿ.ಪಿ.ಯೋಗೇಶ್ಚರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವುದು ಅಚ್ಚರಿ ಮೂಡಿಸಿತು. ಚನ್ನಪಟ್ಟಣ ಉಪಸಮರದಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ಅನ್ಯಮಾರ್ಗವಿಲ್ಲದೆ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರಿದ್ದು ರಾಜಕೀಯ ಪಡಸಾಲೆಯಲ್ಲಿ ಅಚ್ಚರಿ ಮೂಡಿಸಿತು.
ಕೆ.ಎಸ್.ಈಶ್ವರಪ್ಪ ಬಂಡಾಯ, ಉಚ್ಛಾಟನೆ:ಕೆ.ಎಸ್.ಈಶ್ವರಪ್ಪ ಬಿಜೆಪಿ ಹಿರಿಯ ನಾಯಕ. ತಮ್ಮ ಮಗನಿಗೆ ಲೋಕಸಮರದಲ್ಲಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯದ ಬಾವುಟ ಹಾರಿಸಿದ್ದರು. ಶಿವಮೊಗ್ಗ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದು ಅಚ್ಚರಿಯ ಬೆಳವಣಿಗೆಯಾಗಿತ್ತು. ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಕಣಕ್ಕಿಳಿದ ಕೆ.ಎಸ್.ಈಶ್ವರಪ್ಪ ಚುನಾವಣೆಯಲ್ಲಿ ಹೀನಾಯ ಸೋಲು ಕಾಣಬೇಕಾಯಿತು. ಬಂಡಾಯದ ಬಾವುಟ ಹಾರಿಸಿದ ಕಾರಣ ಈಶ್ವರಪ್ಪರನ್ನು ಬಿಜೆಪಿಯಿಂದ ಉಚ್ಛಾಟಿಸಲಾಯಿತು.