ಬೆಂಗಳೂರು: ಅಂಗನವಾಡಿ ಕೇಂದ್ರಗಳ ಅಸ್ತಿತ್ವಕ್ಕೆ ಯಾವುದೇ ರೀತಿಯಿಂದಲೂ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನೀಡಿದ ಭರವಸೆ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಹೋರಾಟವನ್ನು ಹಿಂಪಡೆದಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಹೊಸದಾಗಿ ಎಲ್ಕೆಜಿ, ಯುಕೆಜಿ ಆರಂಭಿಸುವ ಕುರಿತ ಆದೇಶ ರದ್ದು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ- ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಗುರುವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರತಿಭಟನಾ ನಿರತರೊಂದಿಗೆ ಮಾತುಕತೆ ನಡೆಸಿದರು.
ಈ ವೇಳೆ ಸಚಿವರು, ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿ, "ಅಂಗನವಾಡಿ ಕೇಂದ್ರಗಳಿಗೆ ಮತ್ತು ಕಾರ್ಯಕರ್ತೆಯರ ಅಸ್ತಿತ್ವಕ್ಕೆ ತೊಂದರೆಯಾಗಲು ಬಿಡುವುದಿಲ್ಲ. ಈಗಾಗಲೇ ಮುಖ್ಯಮಂತ್ರಿ ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಮುಖ್ಯಮಂತ್ರಿಯವರು ಕೂಡ ಅಂಗನವಾಡಿ ಕೇಂದ್ರಗಳ ಅಸ್ವಿತ್ವಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಬರುವ ಸೋಮವಾರ ಕೂಡ ಮುಖ್ಯಮಂತ್ರಿ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಸಿ ಚರ್ಚಿಸಲಾಗುವುದು. ಮುಖ್ಯವಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ರೀತಿಯಿಂದಲೂ ತೊಂದರೆ ಆಗದಂತೆ ಕ್ರಮ ವಹಿಸಲಾಗುವುದು. ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಹೋರಾಟಕ್ಕೆ ಫಲ ಸಿಗಲಿದೆ" ಎಂದು ಸಚಿವರು ಹೇಳಿದರು.
ಈ ವೇಳೆ ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ನಿರ್ದೇಶಕ ಎನ್. ಸಿದ್ದೇಶ್ವರ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್, ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮೀ, ಉಪಾಧ್ಯಕ್ಷೆ ಸುನಂದಾ, ಕಾರ್ಮಿಕ ಸಂಘಟನೆಗಳ ಮುಖಂಡ ಮೀನಾಕ್ಷಿ ಸುಂದರಂ ಉಪಸ್ಥಿತರಿದ್ದರು.
ಇದನ್ನೂ ಓದಿ:ಬೆಳಗಾವಿ ಸೋಲನ್ನು ವಿನಯಪೂರ್ವಕವಾಗಿ ಸ್ವೀಕರಿಸುವೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ - Minister Lakshmi hebbalkar