ಕೋಲಾರ:ಲೋಕಸಭೆ ಚುನಾವಣೆಗೆಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಗ್ಗಂಟು ಮುಂದುವರೆದಿದ್ದು, ಸದ್ಯ ಎರಡೂ ಬಣಗಳನ್ನು ಹೊರತುಪಡಿಸಿ ಮೂರನೇ ವ್ಯಕ್ತಿಯ ಹೆಸರು ಮುನ್ನೆಲೆಗೆ ಬಂದಿದೆ. ಈ ಮೂಲಕ ಬಣ ರಾಜಕೀಯಕ್ಕೆ ತೆರೆ ಎಳೆಯಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ ಎನ್ನಲಾಗುತ್ತಿದೆ.
ಇದೀಗ ಬೆಂಗಳೂರಿನ ಮಾಜಿ ಮೇಯರ್ ವಿಜಯ್ ಕುಮಾರ್ ಅವರ ಪುತ್ರ ಗೌತಮ್ ಹೆಸರು ಮುನ್ನೆಲೆಗೆ ಬಂದಿದೆ. ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಕೆ.ಎಚ್.ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣಗಳ ನಡುವೆ ಪೈಪೋಟಿ ಇದೆ.
ಅದರಂತೆ, ಕೆ.ಎಚ್.ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್ ಸಿಗಲಿದೆ ಎಂಬ ಸೂಚನೆ ಹಿನ್ನೆಲೆಯಲ್ಲಿ ರಮೇಶ್ ಕುಮಾರ್ ಬಣದ ಶಾಸಕರು ರಾಜೀನಾಮೆಗೆ ಮುಂದಾಗಿದ್ದರು. ಅಲ್ಲದೆ, ಕೋಲಾರದಲ್ಲಿ ಬಲಗೈ ಸಮುದಾಯದವರಿಗೆ ಟಿಕೆಟ್ ಕೊಡಬೇಕು. ಜೊತೆಗೆ ಕೆ.ಎಚ್.ಮುನಿಯಪ್ಪ ಕುಟುಂಬಕ್ಕೆ ಅವಕಾಶ ಕೊಡಬಾರದು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರಲಾಗಿತ್ತು.
ಇತ್ತ ಕೆ.ಎಚ್.ಮುನಿಯಪ್ಪ ಸಹ ರಾಜ್ಯದಲ್ಲಿ ಮೂರು ಕಡೆ ಬಲಗೈ ಸಮುದಾಯಕ್ಕೆ ಟಿಕೆಟ್ ನೀಡಲಾಗಿದೆ. ಹೀಗಾಗಿ, ಕೋಲಾರದಲ್ಲಿ ಎಡಗೈ ಸಮುದಾಯಕ್ಕೆ ಅವಕಾಶ ನೀಡಬೇಕು. ಅಲ್ಲದೆ, ತಮ್ಮ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ನೀಡಬೇಕು ಎಂದು ಪಟ್ಟುಹಿಡಿದಿದ್ದರು. ಈ ನಡುವೆ ಎರಡೂ ಬಣಗಳ ಅಭ್ಯರ್ಥಿಗಳ ಬದಲಿಗೆ ಮೂರನೇ ವ್ಯಕ್ತಿ, ಅಂದರೆ ಗೌತಮ್ ಅವರ ಹೆಸರು ಮುನ್ನೆಲೆಗೆ ಬಂದಿದೆ ಎಂದು ಪಕ್ಷದ ವಲಯದಲ್ಲಿ ಚರ್ಚೆ ನಡೆದಿದೆ.