ಬೆಂಗಳೂರು:ಕೇರಳ ಹೈಕೋರ್ಟ್‌ನಿಂದ ಕರ್ನಾಟಕಕ್ಕೆ ವರ್ಗಾವಣೆಯಾಗಿರುವ ನ್ಯಾಯಮೂರ್ತಿ ಅನು ಶಿವರಾಮನ್ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು.
ಈ ಸಂದರ್ಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್ ಹಾಗು ಮತ್ತಿತರರು ಉಪಸ್ಥಿತರಿದ್ದರು.
ಪರಿಚಯ: ಅನು ಶಿವರಾಮನ್ 1966ರ ಮೇ 25ರಂದು ಕೇರಳದ ಎರ್ನಾಕುಲಂನಲ್ಲಿ ಜನಿಸಿದ್ದರು. 1991ರಲ್ಲಿ ಎರ್ನಾಕುಲಂ ಸರ್ಕಾರಿ ಕಾನೂನು ಕಾಲೇಜಿನಿಂದ ಕಾನೂನು ಪದವಿ ಪಡೆದಿದ್ದರು. 1991ರ ಮಾ.9ರಂದು ವಕೀಲ ವೃತ್ತಿಗೆ ನೋಂದಣಿಯಾಗಿದ್ದರು. 2015ರ ಏ.10ರಂದು ಕೇರಳ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡು, 2017ರ ಏ.5ರಂದು ಖಾಯಂಗೊಂಡಿದ್ದರು. 2024ರ ಮಾ.18ರಂದು ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆಯಾಗಿದ್ದಾರೆ. ಇವರು ಸದ್ಯ ಕರ್ನಾಟಕ ಹೈಕೋರ್ಟ್ ಹಿರಿಯ ನ್ಯಾಯಮೂರ್ತಿಯಾಗಿದ್ದು, ಕೋರ್ಟ್ ಹಾಲ್-2ರಲ್ಲಿ ಕಲಾಪ ನಡೆಸಲಿದ್ದಾರೆ.
ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ನೂತನ ಸಿಜೆ ಆಗಿ ನ್ಯಾ.ನಿಲಯ್ ಅಂಜಾರಿಯಾ ನೇಮಕ