ಹುಬ್ಬಳ್ಳಿ: ದೀಪಾವಳಿ ಹಬ್ಬ ಹಾಗೂ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಸರಣಿ ರಜೆ ಮುಗಿಸಿ ಹಿಂದಿರುಗುವವರು ಹಾಗೂ ಮತ್ತಿತರ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ (NWKRTC) ನವೆಂಬರ್ 3 ಭಾನುವಾರ ಹಾಗೂ 4 ರಂದು ಸೋಮವಾರ ಹೆಚ್ಚುವರಿ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.
ಕಾರ್ಯನಿಮಿತ್ತ ಪರ ಊರುಗಳಲ್ಲಿ ನೆಲೆಸಿರುವವರು ಬೆಳಕಿನ ಹಬ್ಬ ದೀಪಾವಳಿಯ ಆಚರಣೆಗಾಗಿ ಸ್ವಂತ ಊರುಗಳಿಗೆ ಆಗಮಿಸಲು ಅನುಕೂಲವಾಗುವಂತೆ ಅಕ್ಟೋಬರ್ 29ರಿಂದ 31ರ ವರೆಗೆ ವಿವಿಧ ಪ್ರಮುಖ ಸ್ಥಳಗಳಿಂದ ಹುಬ್ಬಳ್ಳಿಯ ಕಡೆಗೆ ಹೆಚ್ಚುವರಿ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿತ್ತು. ಬೆಂಗಳೂರು, ಮಂಗಳೂರು, ಪುಣೆ, ಗೋವಾ ಮತ್ತಿತರ ಪ್ರಮುಖ ಊರುಗಳಲ್ಲಿ ನೆಲೆಸಿರುವ ಸಾವಿರಾರು ಜನರು ಹುಬ್ಬಳ್ಳಿ - ಧಾರವಾಡ ಸೇರಿದಂತೆ ಜಿಲ್ಲೆಯ ವಿವಿಧ ಊರುಗಳಿಗೆ ಆಗಮಿಸಿದ್ದಾರೆ.
ಸರಣಿ ರಜೆ ಮುಗಿಸಿಕೊಂಡು ಹಿಂದಿರುಗುವವರ ಅನುಕೂಲಕ್ಕಾಗಿ ನವೆಂಬರ್ 3ರಂದು ಭಾನುವಾರ ಹಾಗೂ 4ರಂದು ಸೋಮವಾರ ಹುಬ್ಬಳ್ಳಿಯಿಂದ ಹೆಚ್ಚುವರಿ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಅದಕ್ಕಾಗಿ ವೋಲ್ವೋ ಎಸಿ ಐರಾವತ, ಎಸಿ ಸ್ಲೀಪರ್, ನಾನ್ ಎಸಿ ಸ್ಲೀಪರ್, ರಾಜಹಂಸ ಹಾಗೂ ವೇಗದೂತ ಸಾರಿಗೆಗಳು ಸೇರಿದಂತೆ ವಿವಿಧ ಮಾದರಿಯ ಬಸ್ಗಳನ್ನು ನಿಯೋಜಿಸಲಾಗಿದೆ. ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಬೆಂಗಳೂರು, ಹಾವೇರಿ, ದಾವಣಗೆರೆ, ಮಂಗಳೂರು, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಗದಗ ಮತ್ತಿತರ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ಬಸ್ಗಳನ್ನು ಓಡಿಸಲಾಗುತ್ತದೆ. ಈ ಅವಧಿಯಲ್ಲಿ ಜಿಲ್ಲೆಯೊಳಗೆ ವಿವಿಧ ಸ್ಥಳಗಳು ಅಕ್ಕಪಕ್ಕದ ಜಿಲ್ಲೆಗಳ ಪ್ರಮುಖ ಸ್ಥಳಗಳ ನಡುವೆ ಹೆಚ್ಚಿನ ಸಂಖ್ಯೆಯಲ್ಲಿ ಜನರ ಓಡಾಟ ನಿರೀಕ್ಷಿಸಲಾಗಿದೆ. ಪ್ರಯಾಣಿಕರ ದಟ್ಟಣೆಗೆ ತಕ್ಕಂತೆ ಹೆಚ್ಚುವರಿ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.