ಮಂಗಳೂರು: ನಿಷೇಧಿತ ಮಾದಕ ವಸ್ತುವಿನ ಸಾಗಣೆ ಮತ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 15 ಗ್ರಾಂ ಎಂಡಿಎಂಎ ವಶಕ್ಕೆ ಪಡೆದುಕೊಳ್ಳಲಾಗಿದೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಅಬ್ದುಲ್ ಸಲಾಂ ಯಾನೆ ಸಲಾಂ(30), ಸೂರಜ್ ರೈ ಯಾನೆ ಅಂಕಿ(26) ಬಂಧಿತರು.
ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ದ್ವಿಚಕ್ರ ವಾಹನದಲ್ಲಿಟ್ಟುಕೊಂಡು ಮಂಗಳೂರು ನಗರಕ್ಕೆ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಬರುತ್ತಿದ್ದಾರೆಂಬ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ತಲಪಾಡಿ ಕೆ.ಸಿ. ರೋಡ್ ಬಳಿ ದ್ವಿಚಕ್ರ ವಾಹನವನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ 75 ಸಾವಿರ ರೂ. ಮೌಲ್ಯದ 15 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 2 ಮೊಬೈಲ್ ಫೋನ್ಗಳು, ಡಿಜಿಟಲ್ ತೂಕಮಾಪಕ ಹಾಗೂ ಡಿಯೋ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 1,65,000 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.