ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ಪ್ರವರ್ಗ-2ಎಗೆ ಸೇರಿಸಬಾರದು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಸಿಎಂ ಸಿದ್ದರಾಮಯ್ಯಗೆ ಮನವಿ ಪತ್ರ ಸಲ್ಲಿಸಿದೆ. ಕಾವೇರಿ ನಿವಾಸದಲ್ಲಿ ಇಂದು ಸಿಎಂ ಅವರನ್ನು ಭೇಟಿಯಾದ ಒಕ್ಕೂಟದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಪಂಚಮಸಾಲಿ ಸಮುದಾಯದ ಬೇಡಿಕೆಯನ್ನು ಯಾವುದೇ ಕಾರಣಕ್ಕೂ ಪರಿಗಣಿಸಬಾರದು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತು.
ಮನವಿ ಪತ್ರದ ವಿವರ:ಪಂಚಮಸಾಲಿ ಲಿಂಗಾಯತ ಸಮುದಾಯ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಮುಂದುವರೆದಿದೆ. ಡಾ.ನಾಗನಗೌಡ ಸಮಿತಿ, ಎಲ್.ಜಿ.ಹಾವನೂರು ಆಯೋಗದ ವರದಿ, ವೆಂಕಟಸ್ವಾಮಿ ಹಿಂದುಳಿದ ವರ್ಗಗಳ 2ನೇ ಆಯೋಗದ ವರದಿ, ನ್ಯಾಯಮೂರ್ತಿ ಒ.ಚಿನ್ನಪ್ಪರೆಡ್ಡಿ ವರದಿ ಸೇರಿದಂತೆ ಎಲ್ಲಾ ವರದಿಗಳಲ್ಲೂ ಪಂಚಮಸಾಲಿ ಸಮುದಾಯವು ಮುಂದುವರೆದ ಸಮಾಜವೆಂದು ವರದಿ ಮಾಡಿವೆ.