ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕಕ್ಕೇರಿದ್ದು, ನಾಯಕರು ಸಭೆ ನಡೆಸುವ ಮೂಲಕ ಆರೋಪ - ಪ್ರತ್ಯಾರೋಪ ಮಾಡುವುದರಲ್ಲಿ ತೊಡಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಅವರ ವಿರುದ್ಧ ಸೆಡ್ಡು ಹೊಡೆದಿರುವ ಭಿನ್ನಮತೀಯ ನಾಯಕರು, ಎರಡು-ಮೂರು ದಿನದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿ ಪ್ರಕಟಿಸುವುದಾಗಿ ಘೋಷಿಸಿದ್ದಾರೆ.
ಸದಾಶಿವನಗರದಲ್ಲಿರುವ ಮಾಜಿ ಸಚಿವ ಕುಮಾರ ಬಂಗಾರಪ್ಪ ನಿವಾಸದಲ್ಲಿ ಇಂದು ಸಭೆ ನಡೆಸಿದ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಮಾಜಿ ಸಂಸದ ಜಿ. ಎಂ. ಸಿದ್ದೇಶ್ವರ್, ಶಾಸಕರಾದ ಬಿ. ಪಿ ಹರೀಶ್, ಹೊಳಲ್ಕೆರೆ ಚಂದ್ರಪ್ಪ, ಕುಮಾರ ಬಂಗಾರಪ್ಪ ಮತ್ತಿತರ ಮುಖಂಡರು ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಹಲವಾರು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ.
ನಂತರ ಬಿಜೆಪಿಯ ಭಿನ್ನಮತೀಯರು ಹಾಲಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ವಿರುದ್ಧ ತಮ್ಮ ಬಣದಿಂದ ಅಭ್ಯರ್ಥಿ ಕಣಕ್ಕಿಳಿಸಲು ಒಮ್ಮತದ ತೀರ್ಮಾನ ಮಾಡಿದ್ದಾರೆ. ವಿಜಯೇಂದ್ರ ವಿರುದ್ದ ತಮ್ಮ ಬಣದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು. ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲೇಬೇಕು. ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದನ್ನು ದೆಹಲಿಯಲ್ಲಿ ಮತ್ತೊಂದು ಸಭೆ ಸೇರಿ ಪ್ರಕಟಿಸುವ ನಿರ್ಧಾರ ತೆಗೆದುಕೊಂಡಿದೆ ಎಂಬುದು ತಿಳಿದುಬಂದಿದೆ.
ನಮ್ಮ ಬಣದಿಂದ ಅಭ್ಯರ್ಥಿ ಖಚಿತ:ಸಭೆ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಅಧ್ಯಕ್ಷರ ಚುನಾವಣೆಯಲ್ಲಿ ನಮ್ಮ ಬಣದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಖಚಿತ. ಯಾರು ಅಭ್ಯರ್ಥಿಯಾಗಲಿದ್ದಾರೆ ಎಂಬುದು ಮುಖ್ಯವಲ್ಲ. ನಮಗೆ ಎಷ್ಟು ಮತ ಬರುತ್ತವೆ ಎಂಬುದು ಮುಖ್ಯ. ಆದರೆ ಚುನಾವಣೆ ನಡೆಯುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷದಲ್ಲಿ ಕೆಲವರು ಏಕಪಕ್ಷೀಯ ಧೋರಣೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಜಿಲ್ಲಾಧ್ಯಕ್ಷರ ನೇಮಕಾತಿ, ಪದಾಧಿಕಾರಿಗಳ ನೇಮಕಾತಿ ಸೇರಿದಂತೆ ಹಲವಾರು ವಿಷಯಗಳಲ್ಲಿ ವಿಜಯೇಂದ್ರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಇದು ಮೊದಲು ಹೋಗಬೇಕು ಎಂದು ಕಿಡಿಕಾರಿದರು.