ಬೆಳಗಾವಿ :ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ತಪ್ಪಿದ್ದಕ್ಕೆ ಕಾಂಗ್ರೆಸ್ಗೆ ಸೇರ್ಪಡೆಕೊಂಡು ಸ್ಪರ್ಧೆ ಮಾಡಿ ಸೋತ ಬಳಿಕ ಸ್ವಪಕ್ಷಕ್ಕೆ ಬಂದಿರುವಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುತ್ತಿರುವುದಕ್ಕೆ ಜಿಲ್ಲೆಯ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ನಾಯಕರನ್ನು ಭೇಟಿಯಾಗಿ ಸ್ಥಳೀಯರಿಗೇ ಟಿಕೆಟ್ ನೀಡುವಂತೆ ಒತ್ತಡ ಹೇರಲು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.
ಈಗಾಗಲೇ ರಾಜ್ಯಸಭಾ ಮಾಜಿ ಸದಸ್ಯ ಡಾ. ಪ್ರಭಾಕರ್ ಕೋರೆ ಅವರ ನಿವಾಸದಲ್ಲಿ ಸಭೆ ಸೇರಿದ್ದ ಜಿಲ್ಲೆಯ ಬಿಜೆಪಿ ಮುಖಂಡರು ಟಿಕೆಟ್ ವಿತರಣೆಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡುವಂತೆ ತೀರ್ಮಾನ ಕೈಗೊಂಡಿದ್ದರು. ಅದರ ಭಾಗವಾಗಿ ಇಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅಭಯ್ ಪಾಟೀಲ, ಮಾಜಿ ಶಾಸಕರಾದ ಡಾ. ವಿಶ್ವನಾಥ್ ಪಾಟೀಲ್, ಸಂಜಯ್ ಪಾಟೀಲ್, ವಿಧಾನಪರಿಷತ್ ಮಾಜಿ ಸದಸ್ಯ ಮಹಾಂತೇಶ್ ಕವಟಗಿಮಠ ಸೇರಿ 8ಕ್ಕೂ ಹೆಚ್ಚು ಮುಖಂಡರು ಬೆಂಗಳೂರಿಗೆ ತೆರಳಿದ್ದಾರೆ.
ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ರಾಜ್ಯ ಚುನಾವಣೆ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್, ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಸಂಘಟನಾ ಕಾರ್ಯದರ್ಶಿ ಜೆ.ವಿ ರಾಜೇಶ್ ಅವರನ್ನು ಭೇಟಿಯಾಗಿ ಸ್ಥಳೀಯರಿಗೆ ಟಿಕೆಟ್ ಕೊಡುವಂತೆ ಮನವರಿಕೆ ಮಾಡಿಕೊಡಲಿದ್ದಾರೆ. ತಮ್ಮ ಮನವಿಗೆ ರಾಜ್ಯ ನಾಯಕರು ಯಾವ ರೀತಿ ಸ್ಪಂದಿಸುತ್ತಾರೆ ಎಂಬುದರ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳಲಿರುವ ಬೆಳಗಾವಿ ಜಿಲ್ಲೆಯ ಬಿಜೆಪಿ ನಾಯಕರು, ದೆಹಲಿಗೂ ತೆರಳಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗ್ತಿದೆ.