ಬೆಳಗಾವಿ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯವನ್ನು ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ವಿಚಾರಿಸಿದರು.
ಆಸ್ಪತ್ರೆಗೆ ಭೇಟಿ ನೀಡಿ, ಆದಷ್ಟು ಬೇಗನೇ ಗುಣಮುಖರಾಗಿ ಮತ್ತೆ ಜನರ ಸೇವೆಗೆ ಅಣಿಯಾಗುವಂತೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವದಿಸಿದರು. ಇದೇ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಆಸ್ಪತ್ರೆಗೆ ತೆರಳಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅರೋಗ್ಯ ವಿಚಾರಿಸಿ, ಧೈರ್ಯ ತುಂಬಿದರು.
ಕಾರು ಅಪಘಾತ:ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣಿಸುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರಿದ್ದ ಸರ್ಕಾರಿ ಕಾರು ಅಪಘಾತಕ್ಕೀಡಾದ ಘಟನೆ ಮಕರ ಸಂಕ್ರಾಂತಿ ಹಬ್ಬ ಅಂದ್ರೆ ಜನವರಿ 14ರ ಬೆಳಗಿನ ಜಾವ ಸುಮಾರು 5 ಗಂಟೆಗೆ ಚನ್ನಮ್ಮನ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಸಂಭವಿಸಿತ್ತು. ಘಟನೆಯಲ್ಲಿ ಹೆಬ್ಬಾಳ್ಕರ್, ಅವರ ಸಹೋದರ ಚನ್ನರಾಜ್ ಹಟ್ಟಿಹೊಳಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಸುತ್ತೂರು ಮಠದ ಸ್ವಾಮೀಜಿ (ETV Bharat) ಅಪಘಾತದಲ್ಲಿ ಲಕ್ಷ್ಮೀ ಹೆಬ್ಬಾಳ್ಳರ್ ಅವರ ಬೆನ್ನು ಮೂಳೆಗೆ ಭಾರಿ ಪೆಟ್ಟು ಬಿದ್ದು ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚೆನ್ನರಾಜ ಹಟ್ಟಿಹೊಳಿ ಮತ್ತು ಕಾರು ಚಾಲಕ, ಗನ್ಮ್ಯಾನ್ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆದು ಅದೇ ದಿನ ಡಿಸ್ಚಾರ್ಜ್ ಆಗಿದ್ದಾರೆ.
ಹಿಟ್ ಆ್ಯಂಡ್ ರನ್ ಪ್ರಕರಣವೇ?: ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕ ಶಿವಪ್ರಸಾದ ಗಂಗಾಧರಯ್ಯ ಅವರು ದೂರು ನೀಡಿದ್ದಾರೆ. ದೂರಿನ ಪ್ರಕಾರ ಆ ಕಾರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗನ್ ಮ್ಯಾನ್ ಈರಪ್ಪ ಹುಣಶಿಕಟ್ಟಿ ಮತ್ತು ಚಾಲಕ ಸೇರಿ ನಾಲ್ವರು ಪ್ರಯಾಣಿಸುತ್ತಿದ್ದರು. ಬೆಳಗ್ಗೆ 5 ಗಂಟೆಗೆ ಅಂಬಡಗಟ್ಟಿ ಕ್ರಾಸ್ ಬಳಿ ಒಂದು ಕಂಟೇನರ್ ಟ್ರಕ್ ಬಲಗಡೆಯಿಂದ ಎಡಗಡೆಗೆ ಬಂತು. ಈ ವೇಳೆ ಇವರ ಕಾರಿನ ಬಲಭಾಗಕ್ಕೆ ತಾಗಿದೆ. ಅದರಿಂದ ಮುಂದೆ ಆಗಲಿದ್ದ ಹೆಚ್ಚಿನ ಅನಾಹುತ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ, ಸರ್ವೀಸ್ ರಸ್ತೆಗಿಳಿದು ಕಾರು ಮರಕ್ಕೆ ಗುದ್ದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಿಟ್ ಅಂಡ್ ರನ್ ಪ್ರಕರಣ ಎಂದು ಪರಿಗಣಿಸಿದ್ದು, ಎಲ್ಲ ಆಯಾಮದಲ್ಲೂ ತನಿಖೆ ಕೈಗೊಂಡಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಮಾಹಿತಿ ನೀಡಿದ್ದರು.
ಓದಿ:ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಸಚಿವ ಸತೀಶ್ ಜಾರಕಿಹೊಳಿ