ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಅಕ್ಟೋಬರ್ 16ರಂದು (ಇಂದು) ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಅ.16 ಮತ್ತು 17ರಂದು ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂದು (ಅ.16) ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ನಗರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲಾಧಿಕಾರಿ (ETV Bharat) ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅಕ್ಟೋಬರ್ 20ರವರೆಗೆ ದಸರಾ ರಜೆ ಇದೆ. ಆದರೆ, ಖಾಸಗಿ ಶಾಲೆಗಳು ಸೋಮವಾರದಿಂದಲೇ ಪುನರಾರಂಭವಾಗಿವೆ.
ಮಳೆ ಮುಂದುವರಿಯುವ ಮುನ್ಸೂಚನೆ: ಮಳೆ ಮುಂದುವರಿಯುವ ಮುನ್ಸೂಚನೆ ಇರುವುದರಿಂದ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿಗೆ ಸೂಚನೆ ನೀಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈಗಾಗಲೇ ಸುಮಾರು 60 ಜನ ಎನ್‌ಡಿಆರ್‌ಎಫ್/ಎಸ್‌ಡಿಆರ್‌ಎಫ್ ಸಿಬ್ಬಂದಿಯನ್ನು ಬೆಂಗಳೂರಿಗೆ ಮರು ನಿಯೋಜಿಸಲಾಗಿದೆ. ಅಲ್ಲದೆ, ಹೆಚ್ಚುವರಿಯಾಗಿ 40 ಜನ ಸಿಬ್ಬಂದಿಯ ತುಕಡಿಯನ್ನೂ ಇರಿಸಲಾಗಿದೆ. ತತಕ್ಷಣದ ಪ್ರತಿಕ್ರಿಯೆಗಾಗಿ ಅಗ್ನಿಶಾಮಕ ಮತ್ತು ತುರ್ತು ಸೇವಾದಳವನ್ನು ನಿಯೋಜಿಸಲಾಗಿದೆ. ಬೆಂಗಳೂರು ಜಿಲ್ಲಾಡಳಿತವು ಈಗಾಗಲೇ ಶಾಲೆಗಳಿಗೆ ರಜೆ ಘೋಷಿಸಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದಾರೆ.
ಬೆಂಗಳೂರು ಜಿಲ್ಲಾಡಳಿತದ ಪ್ರಕಟಣೆ (ಬೆಂಗಳೂರು ಜಿಲ್ಲಾಡಳಿತ) ಕಾಲೇಜುಗಳಿಗೆ ರಜೆ ಇಲ್ಲ:ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಕಾಲೇಜುಗಳಿಗೆ ರಜೆ ಇಲ್ಲ. ಕಾಲೇಜುಗಳಲ್ಲಿ ಈ ಕೆಳಕಂಡ ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧಪಟ್ಟವರಿಗೆ ಜಿಲ್ಲಾಡಳಿತ ಕೆಲವು ಸೂಚನೆ ನೀಡಿದೆ.
ಜಿಲ್ಲಾಡಳಿತದ ಸೂಚನೆಗಳು:
- ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಕಾಲೇಜು ಮುಖ್ಯಸ್ಥರು ಗಮನವಹಿಸಬೇಕು.
- ದುರ್ಬಲ/ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಮಾಡಲು ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸಬೇಕು.
- ಈಗ ಮಳೆಗಾಗಿ, ಮಂಜಾಗರೂಕತಾ ಕ್ರಮವಾಗಿ ರಜೆ ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟ ಸರಿದೂಗಿಸಬೇಕು.
- ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸಬೇಕು.
- ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳಬೇಕು.
- ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕು.
ಇದನ್ನೂ ಓದಿ: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಮಳೆ: ಇನ್ನೂ ಮೂರು ದಿನ ರಾಜ್ಯದಲ್ಲಿ ವರುಣನ ಅಬ್ಬರ; ಹವಾಮಾನ ಇಲಾಖೆ