ಬೆಂಗಳೂರು:ಕಲೆ, ಸಂಗೀತ ಕ್ಷೇತ್ರದ ಸಾಧನೆಗೆ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಹಾಗೂ ಕ್ರೀಡೆ, ಸಮಾಜ ಸೇವೆ ಕ್ಷೇತ್ರದಲ್ಲಿನ ಸಾಧನೆಗೆ ರಾಜ್ಯ ವಿಕಲಚೇತನ ವ್ಯಕ್ತಿಗಳ ಅಧಿನಿಯಮದ ಮಾಜಿ ಆಯುಕ್ತರಾದ ಕೆ.ಎಸ್.ರಾಜಣ್ಣ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ಕುಲಪತಿ ಎಸ್.ಎಂ.ಡಾ.ಜಯಕರ ತಿಳಿಸಿದರು.
ಸೋಮವಾರ ಬೆಂಗಳೂರು ವಿಶ್ವವಿದ್ಯಾಲಯ 59ನೇ ಘಟಿಕೋತ್ಸವದ ಕುರಿತು ಜ್ಞಾನಜ್ಯೋತಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಂಗಳವಾರ ನಡೆಯಲಿರುವ ಬೆಂಗಳೂರು ವಿಶ್ವವಿದ್ಯಾಲಯದ ಘಟಿಕೋತ್ಸವದ ಅಧ್ಯಕ್ಷತೆಯನ್ನು ಉನ್ನತ ಶಿಕ್ಷಣ ಸಚಿವ ಸಹ - ಕುಲಾಧಿಪತಿ ಡಾ.ಎಂ.ಸಿ.ಸುಧಾಕರ್ ವಹಿಸಲಿದ್ದಾರೆ. ವಿಶ್ವವಿದ್ಯಾಲಯದ ಧನಸಹಾಯ ಆಯೋಗದ ಉಪಾಧ್ಯಕ್ಷ ಮತ್ತು ನವದೆಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಸೋಷಿಯಲ್ ಸೈನ್ಸ್ ರಿಸರ್ಚ್ ಅಧ್ಯಕ್ಷ ಪ್ರೊ.ದೀಪಕ್ ಕುಮಾರ್ ಶ್ರೀವಾಸ್ತವ ಮುಖ್ಯ ಅತಿಥಿಯಾಗಿ ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಬೆಂಗಳೂರು ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವದಲ್ಲಿ 26,210 ವಿದ್ಯಾರ್ಥಿಗಳು ಪದವಿಗೆ ಅರ್ಹರಾಗಿದ್ದಾರೆ. 158 ವಿದ್ಯಾರ್ಥಿಗಳು 308 ಚಿನ್ನದ ಪದಕಗಳನ್ನು ಸ್ವೀಕರಿಸಲಿದ್ದಾರೆ, 79 ನಗದು ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. 140 ವಿದ್ಯಾರ್ಥಿಗಳು ಪಿಹೆಚ್‌ಡಿ ಪದವಿ ಸ್ವೀಕರಿಸಲಿದ್ದಾರೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. 14,063 ವಿದ್ಯಾರ್ಥಿನಿಯರು ಹಾಗೂ 12,007 ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ ಎಂದು ತಿಳಿಸಿದರು.
9 ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ:ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದ ಎಸ್.ಅನ್ನಪೂರ್ಣ ಒಟ್ಟು 9 ಚಿನ್ನದ ಪದಕ ಗಳಿಸುವ ಮೂಲಕ ಅತಿ ಹೆಚ್ಚು ಪದಕ ಗಳಿಸಿದ್ದಾರೆ. ಸ್ನಾತಕ ಪದವಿ ವಿಭಾಗದಲ್ಲಿ ಎಂ.ಅನುರಾಧ 9 ಚಿನ್ನದ ಪದಕ ಗಳಿಸಿದ್ದಾರೆ ಎಂದರು.