ಬೆಂಗಳೂರು:ಬಾಂಗ್ಲಾದೇಶ ಮೂಲದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ, ಹತ್ಯೆ ಮಾಡಿರುವ ಘಟನೆ ರಾಮಮೂರ್ತಿ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಲ್ಕೆರೆ ಲೇಕ್ ಬಳಿ ನಿರ್ಜನ ಪ್ರದೇಶದಲ್ಲಿ ಕತ್ತು ಹಿಸುಕಿ, ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿರುವ ಸ್ಥಿತಿಯಲ್ಲಿ ಬಾಂಗ್ಲಾದೇಶ ಮೂಲದ 28 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಂಗ್ಲಾದೇಶ ಮೂಲದ ಮಹಿಳೆ ಹಾಗೂ ಆಕೆಯ ಪತಿ ಕಳೆದ ಆರು ವರ್ಷಗಳಿಂದಲೂ ಮೂವರು ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದರು. ನಗರದ ಖಾಸಗಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ಮಹಿಳೆ ಮನೆಗೆಲಸ ಮಾಡಿಕೊಂಡಿದ್ದಳು. ಗುರುವಾರ ಕೆಲಸ ಮುಗಿಸಿ ಅಪಾರ್ಟ್‌ಮೆಂಟ್‌ನಿಂದ ತೆರಳಿದ್ದ ಮಹಿಳೆ, ಮನೆಗೆ ಮರಳಿರಲಿಲ್ಲ. ಬೆಳಗ್ಗೆ ಕಲ್ಕೆರೆ ಸಮೀಪದ ನಿರ್ಜನ ಪ್ರದೇಶದಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ರಾಮಮೂರ್ತಿನಗರ ಠಾಣೆ ಪೊಲೀಸರು, ವಿಧಿ ವಿಜ್ಞಾನ ಪ್ರಯೋಗಾಲಯ ಹಾಗೂ ಸೋಕೋ ಟೀಂ ಸಿಬ್ಬಂದಿ ಭೇಟಿ ನೀಡಿ, ತಪಾಸಣೆ ನಡೆಸಿದ್ದಾರೆ.