ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದಲ್ಲಿನ ಹಗರಣದ ಕುರಿತು ತನಿಖೆ ಎದುರಿಸಿದ್ದ ವಕೀಲೆ ಎಸ್.ಜೀವಾ (35) ಆತ್ಮಹತ್ಯೆ ಪ್ರಕರಣದ ತನಿಖೆಯ ಹೊಣೆಯನ್ನು ಸಿಸಿಬಿಗೆ ವಹಿಸಲಾಗಿದೆ. ಜೀವಾ ಆತ್ಮಹತ್ಯೆಯ ಕುರಿತು ಅವರ ಸಹೋದರಿ ಸಂಗೀತಾ ನೀಡಿದ್ದ ದೂರಿನನ್ವಯ ಸಿಐಡಿ ಡಿವೈಎಸ್‌ಪಿ ಕನಕಲಕ್ಷ್ಮಿ ವಿರುದ್ಧ ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣದ ಮುಂದಿನ ತನಿಖೆಯನ್ನ ಸಿಸಿಬಿಗೆ ವಹಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ.
ಭೋವಿ ಅಭಿವೃದ್ಧಿ ನಿಗಮದ ಫಲಾನುಭವಿಗಳಿಗೆ ಮೆಟಿರಿಯಲ್ಸ್ ಪೂರೈಸುತ್ತಿದ್ದ ಜೀವಾ ಎಂಬುವವರು ಆತ್ಮಹತ್ಯೆಗೆ ಶರಣಾದ ಘಟನೆ ನವೆಂಬರ್ 22ರಂದು ನಡೆದಿತ್ತು. ಬನಶಂಕರಿ ಠಾಣೆ ವ್ಯಾಪ್ತಿಯ ರಾಘವೇಂದ್ರ ಲೇಔಟಿನಲ್ಲಿರುವ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಜೀವಾ ಆತ್ಮಹತ್ಯೆಗೆ ಶರಣಾಗಿದ್ದರು. ಪ್ರಕರಣದ ವಿಚಾರಣೆಗೆ ಹಾಜರಾಗಿದ್ದ ಜೀವಾಗೆ ಸಿಐಡಿಯ ಡಿವೈಎಸ್‌ಪಿ ಕನಕಲಕ್ಷ್ಮಿ ಮಾನಸಿಕ ಕಿರುಕುಳ ನೀಡಿದ್ದಾರೆ ಹಾಗೂ 25 ಲಕ್ಷ ರೂ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಮೃತಳ ಸಹೋದರಿ ಸಂಗೀತಾ ಆರೋಪಿಸಿದ್ದರು. ಜೀವಾ ಬರೆದಿಟ್ಟಿದ್ದ ಡೆತ್ ನೋಟ್ ಹಾಗೂ ಮೃತಳ ಸಹೋದರಿ ನೀಡಿದ್ದ ದೂರನ್ನ ಆಧರಿಸಿ ಎಫ್ಐಆರ್ ದಾಖಲಿಸಿಕೊಂಡಿದ್ದ ಬನಶಂಕರಿ ಠಾಣೆ ಪೊಲೀಸರು ಪ್ರಾಥಮಿಕ ತನಿಖೆ ಕೈಗೆತ್ತಿಕೊಂಡಿದ್ದರು.