ಬೆಂಗಳೂರು:ಕೇಂದ್ರದ ಮಾಜಿ ಸಚಿವ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ, ಹಿರಿಯ ರಾಜಕಾರಣಿ ವಿ. ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ.
ಎಕ್ಸ್ನಲ್ಲಿ ಸಂತಾಪ ಸೂಚಿಸಿದ ಮಾಜಿ ಪ್ರಧಾನಿ : "ಮಾಜಿ ಕೇಂದ್ರ ಸಚಿವರು ಹಾಗೂ ಚಾಮರಾಜನಗರದ ಲೋಕಸಭಾ ಕ್ಷೇತ್ರದ ಸದಸ್ಯರಾದ ಶ್ರೀನಿವಾಸ ಪ್ರಸಾದ್ ಅವರು ನಿಧನರಾದ ವಾರ್ತೆ ಕೇಳಿ ಬಹಳ ದುಃಖವಾಗಿದೆ. ಅವರ ಅಗಲಿಕೆ ರಾಜಕೀಯಕ್ಕೆ ತುಂಬಲಾರದ ನಷ್ಟ. ಅವರ ಅಗಲಿಕೆ ಭರಿಸುವ ಶಕ್ತಿಯನ್ನು ಕುಟುಂಬವರಿಗೆ ಮತ್ತು ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಕಂಬನಿ ಮಿಡಿದಿದ್ದಾರೆ.
'ಶ್ರೀನಿವಾಸ ನಿಧನ ದಿಗ್ಭ್ರಮೆ ಮೂಡಿಸಿದೆ'-ಬಿಎಸ್ವೈ: "ಹಿರಿಯ ನಾಯಕರು, ಚಾಮರಾಜನಗರ ಕ್ಷೇತ್ರದ ಸಂಸದರು, ಆತ್ಮೀಯರಾದ ವಿ. ಶ್ರೀನಿವಾಸ ಪ್ರಸಾದ್ ವಿಧಿವಶರಾದ ಸುದ್ದಿ ದಿಗ್ಭ್ರಮೆ ಮೂಡಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ಅವರನ್ನು ಭೇಟಿಯಾಗಿದ್ದು, ಈಗ ಅವರು ನಮ್ಮೊಂದಿಗೆ ಇಲ್ಲ ಎನ್ನುವುದನ್ನು ನಂಬಲಾಗುತ್ತಿಲ್ಲ. ರಾಜ್ಯ ಹಾಗೂ ದೇಶದ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅವರು ಪ್ರಭಾವಿ ದಲಿತ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ನಾಡು ಒಬ್ಬ ಹಿರಿಯ ನೇತಾರರನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಅವರ ಕುಟುಂಬ, ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ" ಎಂದು ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಂಬನಿ: "ಕೇಂದ್ರದ ಮಾಜಿ ಸಚಿವರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ನಮ್ಮ ಪಕ್ಷದ ಸಂಸದರಾದ ಹಿರಿಯ ರಾಜಕಾರಣಿ ವಿ. ಶ್ರೀನಿವಾಸ ಪ್ರಸಾದ್ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ದುಃಖವಾಗಿದೆ. ಶಾಸಕರಾಗಿ, ಸಂಸದರಾಗಿ ಸುಮಾರು ಐವತ್ತು ವರ್ಷಗಳ ಕಾಲ ರಾಜಕೀಯ ಜೀವನದಲ್ಲಿ ತೊಡಗಿಸಿಕೊಂಡು ಸಾಕಷ್ಟು ಜನಪರ ಕಾರ್ಯಗಳನ್ನು ಮಾಡುವ ಮೂಲಕ ಜನಾನುರಾಗಿಯಾಗಿದ್ದರು. ಶ್ರೀನಿವಾಸ ಪ್ರಸಾದ ಅವರ ಅಗಲಿಕೆಯಿಂದ ರಾಜ್ಯದ ಒಬ್ಬ ಹಿರಿಯ ನಾಯಕ ಹಾಗೂ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ. ಅವರ ಕುಟುಂಬ ವರ್ಗ ಹಾಗೂ ಅವರ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ, ಅವರ ಆತ್ಮಕ್ಕೆ ಚಿರಶಾಂತಿ ನೀಡಲೆಂದು ಪ್ರಾರ್ಥಿಸುತ್ತೇನೆ" ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.