ಬೆಂಗಳೂರು:ಮುಡಾ ಅಕ್ರಮ ಆರೋಪ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಿಎಂ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಕುಮಾರಕೃಪಾ ಅತಿಥಿಗೃಹದಿಂದ ಪಾದಯಾತ್ರೆ ಮೂಲಕ ಆಗಮಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಿಎಂ ಅಧಿಕೃತ ನಿವಾಸ ಕಾವೇರಿಗೆ ಮುತ್ತಿಗೆ ಹಾಕಿದರು. ಈ ವೇಳೆ ಗೇಟ್ ಬಳಿಯೇ ತಡೆದ ಪೊಲೀಸರು, ಪ್ರತಿಭಟನಾನಿರತ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು. ಮುಂಜಾಗ್ರತಾ ಕ್ರಮವಾಗಿ ಸಿಎಂ ನಿವಾಸಕ್ಕೆ ಹೆಚ್ಚಿನ ಭದ್ರತೆ ಕಲ್ಪಿಸಿದ್ದು, ಬಿಜೆಪಿ ಕಾರ್ಯಕರ್ತರು ಆಗಮಿಸುತ್ತಿದ್ದಂತೆ ವಶಕ್ಕೆ ಪಡೆದು ಸ್ಥಳದಿಂದ ಕರೆದೊಯ್ದರು.
ಮತ್ತೊಂದೆಡೆ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಕೂಡ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ರಾಜ್ಯಪಾಲರು ನೀಡಿರುವ ಅನುಮತಿಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ತೋರಿಸಿದೆ. ಅಲ್ಲದೆ, ಜನ ಪ್ರತಿನಿಧಿ ನ್ಯಾಯಾಲಯ ಸಿಎಂ ವಿರುದ್ಧ ಎಫ್ಐಆರ್ ದಾಖಲಿಸಿ, ಮೂರು ತಿಂಗಳ ಒಳಗಾಗಿ ತನಿಖೆ ಮುಗಿಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ಕೊಡಬೇಕು ಎಂದು ರಮೇಶ್ ಗೌಡ ಒತ್ತಾಯ ಮಾಡಿದರು.
ಊರಿಗೆಲ್ಲ ನೈತಿಕತೆಯ ಪಾಠ ಮಾಡುವ ಸಿದ್ದರಾಮಯ್ಯ ಅವರು ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದ ಅವರು; ಅವರು ರಾಜೀನಾಮೆ ಕೊಡದಿದ್ದರೆ ಜೆಡಿಎಸ್ ನಿರಂತರವಾಗಿ ಉಗ್ರ ಹೋರಾಟ ನಡೆಸುತ್ತದೆ ಎಂದು ಎಚ್ಚರಿಕೆ ನೀಡಿದರು.