ಕರ್ನಾಟಕ

karnataka

ETV Bharat / state

ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ: ಅಶೋಕ್​ - BJP JDS COORDINATION MEETING

ವಿಧಾನಮಂಡಲದ ಅಧಿವೇಶನ ಹಿನ್ನೆಲೆಯಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅಧ್ಯಕ್ಷತೆಯಲ್ಲಿ ಜೆಡಿಎಸ್-ಬಿಜೆಪಿ ಸಮನ್ವಯ ಸಮಿತಿ ಸಭೆ ಇಂದು ನಡೆಯಿತು.

R ASHOK
ಆರ್​.ಅಶೋಕ್​ (ETV Bharat)

By ETV Bharat Karnataka Team

Published : Feb 25, 2025, 10:51 PM IST

ಬೆಂಗಳೂರು: ರಾಜ್ಯದ ಸಮಸ್ಯೆಗಳ ಪರಿಹಾರಕ್ಕಾಗಿ ವಿಧಾನಮಂಡಲ ಅಧಿವೇಶನದಲ್ಲಿ ಹೋರಾಟ ನಡೆಸಲು ಬಿಜೆಪಿ ಹಾಗೂ ಜೆಡಿಎಸ್ ತಯಾರಿ ಮಾಡಿಕೊಳ್ಳುತ್ತಿವೆ. ಇದರ ಪೂರ್ವಭಾವಿಯಾಗಿ ಇಂದು ಖಾಸಗಿ ಹೋಟೆಲ್​ನಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅಧ್ಯಕ್ಷತೆಯಲ್ಲಿ ಜೆಡಿಎಸ್- ಬಿಜೆಪಿ ಸಮನ್ವಯ ಸಮಿತಿ ಸಭೆ ಕರೆಯಲಾಗಿತ್ತು. ಅಧಿವೇಶನದಲ್ಲಿ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಉಭಯ ಪಕ್ಷಗಳ ಮುಖಂಡರು ಸುಮಾರು ಎರಡು ಗಂಟೆಗಳ ಕಾಲ ಸಮಾಲೋಚನೆ ನಡೆಸಿದರು.

ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಪ್ರತಿಪಕ್ಷದ ನಾಯಕ ಆರ್.ಅಶೋಕ್, "ರಾಜ್ಯದ ಎಲ್ಲ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿಯಾಗಿ ಅಧಿವೇಶನದಲ್ಲಿ ಹೋರಾಟ ಮಾಡಲಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕೋಮುಗಲಭೆ ಹೆಚ್ಚಾಗಿದೆ. ಮೈಸೂರಿನಲ್ಲಿ ಇತ್ತೀಚೆಗೆ ಮುಸ್ಲಿಮರು ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದಾರೆ. ಮೈಕ್ರೋ ಫೈನಾನ್ಸ್​ಗಳ ಸಾಲದ ಹೊರೆಯಿಂದಾಗಿ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕೆಪಿಎಸ್​ಸಿಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಲಂಚ ನೀಡಿ ಪಾಸಾಗಬೇಕಾದ ಸ್ಥಿತಿ ಬಂದಿದೆ" ಎಂದು ದೂರಿದರು.

ಜೆಡಿಎಸ್- ಬಿಜೆಪಿ ಸಮನ್ವಯ ಸಮಿತಿ ಸಭೆ (ETV Bharat)

"ಕೆಪಿಎಸ್​​ಸಿಯಲ್ಲಿ ಕನ್ನಡದ ಕೊಲೆಯಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಕನ್ನಡ ಕಾವಲು ಸಮಿತಿಯ ಅಧ್ಯಕ್ಷರಾಗಿದ್ದರು ಎಂಬುದನ್ನು ಮರೆತಿದ್ದಾರೆ. ಬಿಜೆಪಿ ಸರ್ಕಾರ ರೈತ ಸ್ನೇಹಿಯಾಗಿದ್ದರೆ, ಕಾಂಗ್ರೆಸ್ ನಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಎಲ್ಲೆಲ್ಲೂ ಕಸದ ರಾಶಿ ಕಂಡುಬರುತ್ತಿದೆ. ಇವೆಲ್ಲ ಸಮಸ್ಯೆಗಳ ವಿರುದ್ಧ ಹೋರಾಟ ಮಾಡಲಾಗುವುದು" ಎಂದು ತಿಳಿಸಿದರು.

ಜೆಡಿಎಸ್- ಬಿಜೆಪಿ ಸಮನ್ವಯ ಸಮಿತಿ ಸಭೆ (ETV Bharat)

ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ಕೇಂದ್ರ ಸಚಿವ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಸಂಸದರಾದ ತೇಜಸ್ವಿಸೂರ್ಯ, ಪಿ.ಸಿ.ಮೋಹನ್, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಶಾಸಕರಾದ ಗೋಪಾಲಯ್ಯ, ಎಸ್.ಆರ್.ವಿಶ್ವನಾಥ್, ಮುನಿರತ್ನ, ಸಿ.ಕೆ.ರಾಮಮೂರ್ತಿ, ಎಂ.ಕೃಷ್ಣಪ್ಪ, ರವಿ ಸುಬ್ರಮಣ್ಯ, ಬೈರತಿ ಬಸವರಾಜ್, ಉದಯ ಗರುಡಾಚಾರ್, ಮಾಜಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಮಾಜಿ ಸಚಿವ ಸಿ‌.ಎಸ್.ಪುಟ್ಟರಾಜು, ವಿಧಾನಪರಿಷತ್ ಸದಸ್ಯ ಬೋಜೇಗೌಡ ಮತ್ತಿತರ ಮುಖಂಡರು ಭಾಗವಹಿಸಿದ್ದರು.

ಇದನ್ನೂ ಓದಿ:ವಿಧಾನಸೌಧದಲ್ಲಿ ಶ್ವಾನಗಳ ಹಾವಳಿ ತಪ್ಪಿಸಲು ಶೆಲ್ಟರ್ ವ್ಯವಸ್ಥೆ: ಯು.ಟಿ.ಖಾದರ್

ABOUT THE AUTHOR

...view details