ಮಂಡ್ಯ:ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭಾನುವಾರ ಶ್ರೀಕ್ಷೇತ್ರ ಆದಿಚುಂಚನಗಿರಿಗೆ ಭೇಟಿ ನೀಡಿದರು. ಶ್ರೀ ಕ್ಷೇತ್ರದ ಕಾಲಭೈರವೇಶ್ವರ ಸ್ವಾಮಿ ದರ್ಶನ ಪಡೆದ ಯದುವೀರ್ ವಿಶೇಷ ಪೂಜೆ ಸಲ್ಲಿಸಿದರು. ಯದುವೀರ್ ದೇವಾಲಯಕ್ಕೆ ಆಗಮಿಸುತ್ತಿದ್ದಂತೆ ದೇಗುಲದಿಂದ ಪೂರ್ಣಕುಂಭ ಸ್ವಾಗತ ಕೋರಲಾಯಿತು. ದೇವರ ದರ್ಶನದ ಬಳಿಕ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಜೊತೆ ಕೆಲಕಾಲ ಮಾತುಕತೆ ನಡೆಸಿದರು.
ಆದಿಚುಂಚನಗಿರಿಗೆ ತುಮಕೂರು ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಕೂಡ ಭೇಟಿ ನೀಡಿ ಕಾಲಭೈರವೇಶ್ವರನ ದರ್ಶನ ಪಡೆದರು. ಬಾಲಗಂಗಾಧರನಾಥ ಸ್ವಾಮೀಜಿಯವರ ಗದ್ದುಗೆಗೆ ಪುಷ್ಪ ನಮನ ಸಲ್ಲಿಸಿದರು. ವಿ. ಸೋಮಣ್ಣಗೆ ಮಾಜಿ ಸಚಿವ ಕೆ. ಗೋಪಾಲಯ್ಯ ಸಾಥ್ ನೀಡಿದರು.
ಇದನ್ನೂ ಓದಿ:ಸುಮಲತಾ ಅಂಬರೀಶ್ ಗೆ ಕುಮಾರಸ್ವಾಮಿ ಟಿಕೆಟ್ ಕೊಡಿಸಿ ಮೈತ್ರಿ ಧರ್ಮಪಾಲನೆ ಮಾಡಲಿ: ಬೇಲೂರು ಸೋಮಶೇಖರ್
ಎಂಪಿ ಚುನಾವಣೆಗೆ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: 2024ರ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೇಂದ್ರ ಚುನಾವಣಾ ಆಯೋಗವು 18ನೇ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಕುಮಾರ ತಿಳಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆಯಿಂದಲೇ ಜಿಲ್ಲೆಯ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ ಎಂದು ತಿಳಿಸಿದರು. ಮಂಡ್ಯ ಜಿಲ್ಲೆಯು ಸಾಮಾನ್ಯ ಕ್ಷೇತ್ರವಾಗಿದೆ. ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳಾದ ಮಳವಳ್ಳಿ, ಮದ್ದೂರು, ಮಂಡ್ಯ ಮತ್ತು ಮೇಲುಕೋಟೆ, ನಾಗಮಂಗಲ ಹಾಗೂ ಕೆಆರ್ ಪೇಟೆ, ಶ್ರೀರಂಗಪಟ್ಟಣ, ಕೆಆರ್ ನಗರ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತವೆ. ಮಾರ್ಚ್ 28ರಂದು ಅಧಿಸೂಚನೆಯನ್ನು ಪ್ರಕಟಿಸಲಾಗುವುದು. ಮಾರ್ಚ್ 28 ರಿಂದ ಏಪ್ರಿಲ್ 4 ರ ವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 08 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದ್ದು, ನಾಮಪತ್ರ ಹಿಂತೆಗೆದುಕೊಳ್ಳುವುದಕ್ಕೆ ಅವಕಾಶ ಇದೆ. ಏಪ್ರಿಲ್ 26 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಮಾಹಿತಿ ನೀಡಿದರು.