ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ನೈರುತ್ಯ ಪರವೀಧರರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ. ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರಾದ ಲಿಂಗರಾಜ ಪಾಟೀಲ್ ಉಚ್ಚಾಟನೆ ಆದೇಶ ಹೊರಡಿಸಿದ್ದಾರೆ.
ಆರು ವರ್ಷಗಳ ಕಾಲ ಪಕ್ಷದಿಂದ ರಘುಪತಿ ಭಟ್ ಅವರನ್ನು ಉಚ್ಚಾಟಿಸಲಾಗಿದೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ ಎಂದು ತಿಳಿಸಲಾಗಿದೆ. ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಆದೇಶಿಸಲಾಗಿದೆ.
ಜೂ.3ರಂದು ನಡೆಯುವ ವಿಧಾನಪರಿಷತ್ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೀರಿ. ಇದು ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿದಂತಾಗಿದೆ. ಈ ಪತ್ರ ತಲುಪಿದ ಎರಡು ದಿನದ ಒಳಗಾಗಿ ಬಿಜೆಪಿ ಶಿಸ್ತು ಸಮಿತಿಯ ಮುಂದೆ ಸ್ಪಷ್ಟೀಕರಣ ನೀಡಬೇಕು ಎಂದು ಬಿಜೆಪಿ ರಾಜ್ಯ ಶಿಸ್ತು ಸಮಿತಿಯ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಸೂಚಿಸಿದ್ದರು. ಇದೀಗ ರಘುಪತಿ ಭಟ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.
ರಘುಪತಿ ಭಟ್ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಬಿಜೆಪಿ ಹೈ ಕಮಾಂಡ್ ರಘುಪತಿ ಭಟ್ಗೆ ಟಿಕೆಟ್ ನೀಡಿರಲಿಲ್ಲ. ಡಾ.ಧನಂಜಯ ಸರ್ಜಿಯನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಇದರಿಂದ ತೀವ್ರ ಅಸಮಾಧಾನಗೊಂಡ ರಘಪತಿ ಭಟ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.