ಬೆಂಗಳೂರು:ರಾಜ್ಯದ ಪ್ರಮುಖ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಎನ್ಡಿಎ ಒಕ್ಕೂಟಕ್ಕೆ ಸೇರಿದ ನಂತರ ಬಿಜೆಪಿ ಮತ್ತು ಜೆಡಿಎಸ್ ನಾಯಕರನ್ನೊಳಗೊಂಡ ಮೊದಲ ಅಧಿಕೃತ ಸಭೆ ಇಂದು ನಡೆಯಿತು. ಪರಿಷತ್ ಉಪ ಚುನಾವಣೆ ಎದುರಿಸುವ ಕುರಿತ ಸಭೆಯ ಮೂಲಕ ಮುಂದಿನ ಲೋಕಸಭಾ ಚುನಾವಣೆಗೆ ಒಟ್ಟಾಗಿ ಹೋಗುವ ನಿರ್ಧಾರಕ್ಕೆ ಮುನ್ನುಡಿ ಬರೆಯಲಾಯಿತು.
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಡಾಲರ್ಸ್ ಕಾಲೊನಿಯಲ್ಲಿರುವ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ದೋಸ್ತಿ ನಾಯಕರ ಸಭೆ ನಡೆಯಿತು. ಉಪ ಚುನಾವಣೆಗೆ ಮೈತ್ರಿ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆ ಮಾತುಕತೆಯಾಯಿತು. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ಮುಖಂಡ ನಿಖಿಲ್ ಕುಮಾರಸ್ವಾಮಿ, ಜಿ.ಟಿ.ದೇವೇಗೌಡ, ಬಂಡೆಪ್ಪ ಕಾಶಂಪೂರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ, ಮಾಜಿ ಡಿಸಿಎಂಗಳಾದ ಗೋವಿಂದ ಕಾರಜೋಳ, ಡಾ. ಅಶ್ವತ್ಥನಾರಾಯಣ ಉಪಸ್ಥಿತರಿದ್ದರು.
ಒಗ್ಗಟ್ಟಿನ ಮಂತ್ರ: ಮೈತ್ರಿ ಪಕ್ಷಗಳ ಮೊದಲ ಅಧಿಕೃತ ಜಂಟಿ ಸಭೆ ಇದಾಗಿದ್ದು, ಉಭಯ ಪಕ್ಷಗಳ ನಾಯಕರು ಒಗ್ಗಟ್ಟಿನ ಮಂತ್ರ ಜಪಿಸಿದರು. ಉಪ ಚುನಾವಣೆ ಗೆಲ್ಲುವ ಮೂಲಕ ಆಡಳಿತ ಪಕ್ಷಕ್ಕೆ ಎಚ್ಚರಿಕೆ ನೀಡಬೇಕು. ಲೋಕಸಭಾ ಚುನಾವಣೆಯಲ್ಲಿ ಎಲ್ಲಾ 28 ಕ್ಷೇತ್ರ ಮೈತ್ರಿಕೂಟದ ಪಾಲಾಗಬೇಕು ಎನ್ನುವ ಕುರಿತು ಚರ್ಚಿಸಲಾಯಿತು. ಈ ಸಭೆಯ ಚರ್ಚೆಯ ವಿಷಯವನ್ನು ಬಿಜೆಪಿ ಹೈಕಮಾಂಡ್ ಗಮನಕ್ಕೆ ತಂದು ಮುಂದಿನ ಹೆಜ್ಜೆ ಇಡುವ ನಿರ್ಧಾರಕ್ಕೆ ಬರಲಾಯಿತು.