ಬೆಂಗಳೂರು: ವಿಜಯನಗರ ಆದಿಚುಂಚನಗಿರಿ ಶಾಖಾ ಮಠಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಒಟ್ಟಾಗಿ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದರು. ಲೋಕಸಭೆ ಚುನಾವಣೆ ಹಿನ್ನೆಲೆ, ಸಮುದಾಯದ ಮತ ಕ್ರೋಢೀಕರಣದ ಲೆಕ್ಕಾಚಾರದೊಂದಿಗೆ ದೋಸ್ತಿ ಪಕ್ಷಗಳ ನಾಯಕರು ಆದಿಚುಂಚನಗಿರಿ ಮಠಕ್ಕೆ ಒಟ್ಟಾಗಿ ಬಂದು ಒಗ್ಗಟ್ಟು ಪ್ರದರ್ಶಿಸಿದರು. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ 10ಕ್ಕೂ ಹೆಚ್ಚು ಅಭ್ಯರ್ಥಿಗಳು ಮಠಕ್ಕೆ ಆಗಮಿಸಿ ನಿರ್ಮಲಾನಂದ ಶ್ರೀಗಳ ಆಶೀರ್ವಾದ ಪಡೆದರು.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪ್ರತಿಪಕ್ಷ ನಾಯಕ ಆರ್.ಅಶೋಕ್, ಶೋಭಾ ಕರಂದ್ಲಾಜೆ, ಯದುವೀರ್ ಒಡೆಯರ್, ವಿ. ಸೋಮಣ್ಣ, ಡಾ.ಕೆ. ಸುಧಾಕರ್, ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್, ಸಿ.ಎನ್. ಮಂಜುನಾಥ್, ಕೋಲಾರ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು, ಜಿ.ಟಿ. ದೇವೇಗೌಡ, ಅಶ್ವಥ್ ನಾರಾಯಣ್, ಸಿ.ಟಿ. ರವಿ ಸೇರಿ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಮಠಕ್ಕೆ ಭೇಟಿ ನೀಡಿದರು.
ದೋಸ್ತಿಗಳ ಒಗ್ಗಟ್ಟು ಪ್ರದರ್ಶನ: ದೋಸ್ತಿ ನಾಯಕರು ಒಟ್ಟಾಗಿ ಮಠಕ್ಕೆ ಆಗಮಿಸುವ ಮೂಲಕ ಒಗ್ಗಟ್ಟಿನ ಸಂದೇಶ ರವಾನಿಸಿದರು. ಲೋಕಸಭೆ ಚುನಾವಣೆ ಹಿನ್ನೆಲೆ, ಒಗ್ಗಟ್ಟು ಪ್ರದರ್ಶಿಸಿರುವುದು ಮಹತ್ವ ಪಡೆದುಕೊಂಡಿದೆ. ಈ ಭೇಟಿ ಹಳೇ ಮೈಸೂರು ಕ್ಷೇತ್ರಗಳಲ್ಲಿ ಒಕ್ಕಲಿಗ ಸಮುದಾಯಕ್ಕೆ ಒಗ್ಗಟ್ಟಿನ ಸಂದೇಶ ರವಾನಿಸುವ ಪ್ರಯತ್ನವನ್ನು ಮೈತ್ರಿ ನಾಯಕರು ಮಾಡಿದ್ದಾರೆ. ಈ ನಿಟ್ಟಿನಲ್ಲಿ ಬೆಂಗಳೂರು ನಗರದ ಮೂರು ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳು, ಹಳೇ ಮೈಸೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿಗಳಾದ ಯದುವೀರ್ ಒಡೆಯರ್, ತುಮಕೂರು ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ, ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್, ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಸಿ.ಎನ್. ಮಂಜುನಾಥ್ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.