ಬೆಂಗಳೂರು: ತುಮಕೂರಿನಲ್ಲಿ ಸೋಮವಾರ ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡರು ಭಾಗವಹಿಸಿದ್ದ ಚುನಾವಣಾ ಪ್ರಚಾರ ಸಭೆಗೆ ನುಗ್ಗಿ ಗಲಭೆ ಉಂಟುಮಾಡಲು ಪ್ರಚೋದನೆ ನೀಡಿರುವ ಕಾಂಗ್ರೆಸ್ ಪಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜೆಡಿಎಸ್-ಬಿಜೆಪಿ ನಿಯೋಗ ಇಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಸಿತು.
ದೇವೇಗೌಡರು ಅಧ್ಯಕ್ಷತೆ ವಹಿಸಿದ್ದ ಜೆಡಿಎಸ್-ಬಿಜೆಪಿ ನಾಯಕರಿದ್ದ ಸಭೆಗೆ ಸೂಕ್ತ ಭದ್ರತೆ ಒದಗಿಸದೇ ಲೋಪ ಉಂಟುಮಾಡಲಾಗಿದೆ ಎಂದು ಮಾಜಿ ಸಚಿವ ಸುರೇಶ್ ಕುಮಾರ್, ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ನೇತೃತ್ವದ ನಿಯೋಗ ಆರೋಪಿಸಿದೆ.
ತುಮಕೂರು ಲೋಕಸಭಾ ಕ್ಷೇತ್ರದ ಎನ್‍ಡಿಎ ಅಭ್ಯರ್ಥಿ ವಿ.ಸೋಮಣ್ಣ ಅವರನ್ನು ಬೆಂಬಲಿಸಿ ನಿನ್ನೆ ತುಮಕೂರಿನ ಕುಂಚಿಟಿಗ ಸಮುದಾಯ ಭವನದಲ್ಲಿ ಬಿಜೆಪಿ-ಜೆಡಿಎಸ್ ಮುಖಂಡರ ಸಭೆ ನಡೆಸಲಾಗಿತ್ತು. ಸಭೆಯ ಅಧ್ಯಕ್ಷತೆಯನ್ನು ದೇವೇಗೌಡರು ವಹಿಸಿದ್ದರು. ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರಲಿಲ್ಲ. ಕಾಂಗ್ರೆಸ್ ಬೆಂಬಲಿತ ಮಹಿಳೆ ಸಭಾಂಗಣಕ್ಕೆ ಆಗಮಿಸಿ ವೇದಿಕೆಯತ್ತ ಬಂದಿದ್ದಾರೆ ಎಂದು ದೂರಲಾಗಿದೆ.