ಮಂಗಳೂರು:ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಸದ್ಯ ಮನೆಮನೆ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದೆ. ಬಿಜೆಪಿಯ ಪ್ರಬಲ ಕ್ಷೇತ್ರಗಳಲ್ಲಿ ಒಂದಾದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಚಾರದಲ್ಲಿ ನಿರತರಾಗಿದ್ದಾರೆ. ಈ ನಡುವೆ ಲೋಕಸಭಾ ಚುನಾವಣಾ ಪ್ರಚಾರಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಪ್ರಧಾನಿ ಸೇರಿದಂತೆ ರಾಷ್ಟ್ರೀಯ ನಾಯಕರನ್ನು ಕರೆಸುವ ಪ್ರಯತ್ನವನ್ನು ಬಿಜೆಪಿ ಮುಖಂಡರು ಮಾಡುತ್ತಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಬಿಜೆಪಿಯ ಪ್ರಬಲ ಕ್ಷೇತ್ರ. ಸಂಘಟನಾತ್ಮಕವಾಗಿಯೂ ಪ್ರಬಲವಾಗಿರುವ ಬಿಜೆಪಿ ಇಲ್ಲಿ ಕಳೆದ ಮೂರು ದಶಕಗಳಿಂದ ವಿಜಯಿಯಾಗುತ್ತಲೆ ಬಂದಿದೆ. ಚುನಾವಣೆಯ ಪ್ರಚಾರವನ್ನು ಭರ್ಜರಿಯಾಗಿ ನಡೆಸಿ ಮತದಾರರನ್ನು ಸೆಳೆಯುವ ಪ್ರುಯತ್ನವನ್ನು ಬಿಜೆಪಿ ಕಳೆದ ಮೂರು ದಶಕಗಳಿಂದ ಮಾಡುತ್ತಾ ಬಂದಿದೆ. ಕಳೆದ ಮೂರು ದಶಕಗಳಿಂದ ನಡೆಯುತ್ತಾ ಬಂದ ಚುನಾವಣೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲು ಅಟಲ್ ಬಿಹಾರಿ ವಾಜಪೇಯಿ, ಎಲ್ ಕೆ ಅಡ್ವಾಣಿ, ನರೇಂದ್ರ ಮೋದಿ, ಉಮಾಭಾರತಿ, ಅಮಿತ್ ಶಾ, ಯೋಗಿ ಆಗಮಿಸಿದ್ದರು. ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿಯೂ ಪ್ರಧಾನಿ ನರೇಂದ್ರ ಮೋದಿ, ಯೋಗಿ, ಅಮಿತ್ ಶಾ ಪ್ರಚಾರ ಮಾಡಿದ್ದರು.
ಚುನಾವಣೆಯ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕರೆಯಿಸಬೇಕೆಂಬುದು ಬಿಜೆಪಿ ಕಾರ್ಯಕರ್ತರ ಒತ್ತಾಸೆ ಆಗಿದೆ. ಇವರನ್ನು ಕರೆಸಿದರೆ ಚುನಾವಣಾ ಪ್ರಚಾರ ರಂಗು ಪಡೆಯಲಿದ್ದು, ಇನ್ನಷ್ಟು ಮತದಾರರನ್ನು ಸೆಳೆಯಲು ಸಾಧ್ಯವಿದೆ ಎಂಬುದು ಬಿಜೆಪಿ ನಾಯಕರ ಲೆಕ್ಕಾಚಾರ. ಈ ಬಗ್ಗೆ ಈಟಿವಿ ಭಾರತ ಜೊತೆಗೆ ಮಾತನಾಡಿದ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ನಮ್ಮ ಜಿಲ್ಲೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕರೆಸಲು ಪ್ರಯತ್ನ ಮಾಡುತ್ತಿದ್ದೇವೆ ಎಂದರು.