ಬೆಂಗಳೂರು:ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಇದೀಗ ರಾಜಕೀಯ ವಲಯದಲ್ಲಿ ಇದರ ಪರ ಹಾಗೂ ವಿರೋಧ ನಾಯಕರ ಹೇಳಿಕೆಗಳು ಕೇಳಿಬರುತ್ತಿವೆ. ತಮ್ಮ ಪಾದಯಾತ್ರೆಯ ಪ್ರತಿಫಲ. ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. ಬಿ.ವೈ. ವಿಜಯೇಂದ್ರ ಸೇರಿದಂತೆ ಮುಂತಾದ ಕೇಸರಿ ನಾಯಕರು ರಾಜ್ಯಪಾಲರ ನಿರ್ಧಾರದ ಪರ ಬ್ಯಾಟ್ ಬೀಸಿದ್ದಾರೆ.
ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ: ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, "ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಭಂಡತನ ಪ್ರದರ್ಶಿಸುತ್ತಿದ್ದರು. ಸಿದ್ದರಾಮಯ್ಯನವರು ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ" ಎಂದು ಒತ್ತಾಯಿಸಿದ್ದಾರೆ.
ನಿವೇಶನ ಕಳೆದುಕೊಂಡವರಿಗೆ ತನಿಖೆಯಿಂದ ನ್ಯಾಯ: ಪ್ರತಿಪಕ್ಷ ನಾಯಕ ಆರ್.ಅಶೋಕ್ ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, "ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು. ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ನಮ್ಮ ಉದ್ದೇಶ. ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಆಗಿನ ರಾಜ್ಯಪಾಲರು ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್ ಕೈವಾಡವಿತ್ತು ಎಂದರೆ ಅದನ್ನು ಒಪ್ಪುತ್ತಾರಾ? ಈಗ ನೈತಿಕತೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ತೋರಲಿ" ಎಂದಿದ್ದಾರೆ.
ಸಿದ್ದರಾಮಯ್ಯ ಸ್ಥಿತಿ ನೋಡಿ ಬಹಳಷ್ಟು ಕಾಂಗ್ರೆಸ್ ನಾಯಕರೇ ಒಳಗೊಳಗೇ ಖುಷಿ ಪಟ್ಟಿದ್ದಾರೆ:ಹುಬ್ಬಳ್ಳಿ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್, "ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಲೇ ಬರುತ್ತಿದೆ. ಇದೀಗ ರಾಜ್ಯಪಾಲರಿಗೆ ಖಾಸಗಿ ವ್ಯಕ್ತಿಗಳು ಸಹ ಕೇಸ್ ದಾಖಲಿಸಲು ಮುಂದಾಗಿದ್ದಾರೆ. ಇದಕ್ಕಾಗಿ ರಾಜ್ಯಪಾಲರು ಕಾನೂನು ತಜ್ಞರ ಜೊತೆಗೆ ಸಮಾಲೋಚನೆ ನಡೆಸಿ ಅಂತಿಮವಾಗಿ ಅನುಮತಿ ಕೊಟ್ಟಿದ್ದಾರೆ. ಇದು ಕಾನೂನು ಬದ್ದವಾದ ನಿರ್ಧಾರ. ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಸಿದ್ದರಾಮಯ್ಯಗೆ ಈ ಪರಿಸ್ಥಿತಿ ಬಂದಿದ್ದನ್ನು ನೋಡಿ ಬಹಳಷ್ಟು ಜನ ಕಾಂಗ್ರೆಸ್ ನಾಯಕರೇ ಒಳಗೊಳಗೆ ಖುಷಿ ಪಡ್ತಿದ್ದಾರೆ. ಈ ಬಾರಿ ಸಿದ್ದರಾಮಯ್ಯ ಪಾರಾಗಲು ಸಾಧ್ಯವಿಲ್ಲ" ಎಂದರು.
ಬಿಜೆಪಿಯ ಪಾದಯಾತ್ರೆಗೆ ಸಿಕ್ಕ ಜಯ:ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕ ಚನ್ನಬಸಪ್ಪ, "ರಾಜ್ಯಪಾಲರ ಅನುಮತಿ, ಬಿಜೆಪಿ ಮಾಡಿದ ಪಾದಯಾತ್ರೆಗೆ ಸಿಕ್ಕ ಜಯ. ನಾವು ರಾಜಕಾರಣಕ್ಕೋಸ್ಕರ ಹೋರಾಟ ಮಾಡಿರಲಿಲ್ಲ. ಯಾವುದೇ ಚುನಾವಣೆ ಇಲ್ಲದ ಸಂದರ್ಭದಲ್ಲಿ ಹೋರಾಟ ಮಾಡಿದ್ದೆವು. ಕಾಂಗ್ರೆಸ್ ದ್ವಂದ್ವ ನಿಲುವಿಗೆ ಇಂದಿರಾ ಗಾಂಧಿ ಅವರೇ ಉದಾಹರಣೆ. ಅವರು ಚುನಾವಣೆಗೆ ಸ್ಪರ್ಧಿಸಿದ್ದರ ವಿರುದ್ದ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿತ್ತು. ಹೈಕೋರ್ಟ್ ತೀರ್ಪಿನ ವಿರುದ್ಧ ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದರು. ಕಾಂಗ್ರೆಸ್ ಸಹ ಪ್ರಾಸಿಕ್ಯೂಷನ್ ವಿರುದ್ಧ ಹೈಕೋರ್ಟ್ಗೆ ಹೋಗಲು ಚಿಂತನೆ ನಡೆಸುತ್ತಿದೆ" ಎಂದು ಹೇಳಿದರು.
ಕ್ಲೀನ್ ಚಿಟ್ ಸಿಕ್ಕಿ ಯಶಸ್ವಿಯಾಗಿ ಹೊರಗೆ ಬರಲಿ: ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು, "ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ಕಾರಣ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ನೀಡಬೇಕು" ಎಂದು ಆಗ್ರಹಿಸಿದ್ದಾರೆ. "ನನ್ನ ಮೇಲೆ ಆಪಾದನೆ ಬಂದಾಗ ನನ್ನ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಆಗ ನಾನು ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ಕೊಟ್ಟಿದ್ದೆ. ಈಗ ಅವರ ಮೇಲೆಯೇ ಆರೋಪ ಬಂದಿದೆ. ಅವರು ಸಹ ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ಕೊಡ್ತಾರೆ ಅಂತಾ ನನಗೆ ವಿಶ್ವಾಸ ಇದೆ. ಸಿದ್ದರಾಮಯ್ಯ ಕಾನೂನು ಬದ್ಧವಾಗಿ ಹೋರಾಟ ಮಾಡಿ ಕ್ಲೀನ್ ಚಿಟ್ ಸಿಕ್ಕರೆ ಯಶಸ್ವಿಯಾಗಿ ಹೊರಗೆ ಬರಲಿ" ಎಂದರು.
ಸತ್ಯಕ್ಕೆ ದೊರೆತ ಜಯ:ಪ್ರಾಸಿಕ್ಯೂಷನ್‌ಗೆ ಅನಮತಿ ನೀಡಿರುವುದು ಸತ್ಯಕ್ಕೆ ದೊರೆತ ಜಯ ಎಂದು ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ, ದೂರುದಾರ ಶ್ರೀವತ್ಸ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸತ್ಯಾಸತ್ಯತೆ ಪರಿಶೀಲಿಸಿಯೇ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಸತ್ಯಕ್ಕೆ ಜಯ ದೊರಕಿದೆ. ಕಾಂಗ್ರೆಸ್ ಹೈಕಮಾಂಡ್ ಈಗಲಾದರೂ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ಪಡೆದು, ತನಿಖೆಗೆ ಸಹಕರಿಸಲು ಸೂಚಿಸುವಂತೆ ಅವರು ಒತ್ತಾಯಿಸಿದರು.