ಬೆಂಗಳೂರು: ಸಿಎಂ ಸಿದ್ದರಾಮಯ್ಯ ಚಾಮರಾಜನಗರದಲ್ಲಿ ಆಪರೇಷನ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅಳಿಯ ಧೀರಜ್ ಪ್ರಸಾದ್ ಕಾಂಗ್ರೆಸ್ ಸೇರಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶನಿವಾರ, ಡಿಕೆಶಿ ಮತ್ತು ಚಾಮರಾಜನಗರ ಅಭ್ಯರ್ಥಿ ಸುನೀಲ್ ಬೋಸ್ ಸಮ್ಮುಖದಲ್ಲಿ ಧೀರಜ್ ಪ್ರಸಾದ್ ಕೈ ಪಕ್ಷ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷರಾಗಿದ್ದ ಧೀರಜ್ ಪ್ರಸಾದ್ ಅವರು ಶ್ರೀನಿವಾಸ್ ಪ್ರಸಾದ್ ಅವರ ಸಹೋದರಿಯ ಮಗ. ಇತ್ತೀಚಿಗೆ ಸಚಿವ ಮಹದೇವಪ್ರಸಾದ್ ಹಾಗೂ ಚಾಮರಾಜನಗರ ಅಭ್ಯರ್ಥಿ ಸುನಿಲ್ ಬೋಸ್ ಅವರು ಶ್ರೀನಿವಾಸ್ ಪ್ರಸಾದ್ ಮನೆಗೆ ತೆರಳಿ ಚರ್ಚೆ ನಡೆಸಿದ್ದರು. ಇತ್ತ ಸಿಎಂ ಸಿದ್ದರಾಮಯ್ಯ ಕೂಡ ಶ್ರೀನಿವಾಸ್ ಪ್ರಸಾದ್ಗೆ ಕರೆ ಮಾಡಿ ಮಾತನಾಡಿದ್ದರು. ಇದೀಗ ಅವರ ಅಳಿಯ ಕಾಂಗ್ರೆಸ್ ಸೇರಿರುವುದು ಬಿಜೆಪಿಗೆ ಹಿನ್ನಡೆಯಾಗಿದೆ. ಮಾಜಿ ಸಚಿವ ಕೋಟೆ ಎಂ.ಶಿವಣ್ಣ ಸೇರಿ ಮೂವರು ನಾಯಕರು ಮೊನ್ನೆಯಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು.
ಚಾಮರಾಜನಗರದಿಂದ ಮಾಜಿ ಶಾಸಕ ಬಾಲರಾಜ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಸಚಿವ ಮಹದೇವಪ್ಪ ಪುತ್ರ ಸುನಿಲ್ ಬೋಸ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಬಿಜೆಪಿಯಿಂದ ತನ್ನ ಪುತ್ರ ಅಥವಾ ಅಳಿಯನಿಗೆ ಟಿಕೆಟ್ ನೀಡುವಂತೆ ಶ್ರೀನಿವಾಸ ಪ್ರಸಾದ್ ಒತ್ತಾಯಿಸಿದ್ದರು. ಆದರೆ ಅಂತಿಮವಾಗಿ ಬಿಜೆಪಿ ಹೈಕಮಾಂಡ್ ಮಾಜಿ ಶಾಸಕ ಬಾಲರಾಜ್ಗೆ ಮಣೆ ಹಾಕಿತ್ತು.