ಕರ್ನಾಟಕ

karnataka

ETV Bharat / state

ಬಿಜೆಪಿಯಿಂದ ಕಾಂಗ್ರೆಸ್​ನ 50 ಶಾಸಕರಿಗೆ ತಲಾ 50 ಕೋಟಿ ರೂಪಾಯಿ ಆಫರ್: ಸಿಎಂ ಸಿದ್ದರಾಮಯ್ಯ

ಈ ಬಾರಿಯೂ ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 50 ಕೋಟಿ ರೂಪಾಯಿ ಆಫರ್ ಮಾಡಿತ್ತು. ಆದರೆ ನಮ್ಮ ಶಾಸಕರು ಆಮಿಷಕ್ಕೆ ಒಳಗಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ (ETV Bharat)

By ETV Bharat Karnataka Team

Published : Nov 14, 2024, 8:13 AM IST

ಮೈಸೂರು: ಈವರೆಗೆ ಬಿಜೆಪಿ, ರಾಜ್ಯದಲ್ಲಿ ಸ್ವಂತ ಶಕ್ತಿಯಿಂದ ಒಂದು ಬಾರಿಯೂ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಮಾತ್ರ ಅವರು ಅಧಿಕಾರಕ್ಕೆ ಬಂದಿದ್ದಾರೆ. ಈ ಸಲವೂ ಕಾಂಗ್ರೆಸ್​​ನ 50 ಮಂದಿ ಶಾಸಕರಿಗೆ ತಲಾ 50 ಕೋಟಿ ರೂ ಆಫರ್ ನೀಡಿ ಖರೀದಿಸಲು ಯತ್ನಿಸಿದ್ದರು. ಆದರೆ ನಮ್ಮ ಶಾಸಕರು ಆಮಿಷಕ್ಕೆ ಒಳಗಾಗಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಬುಧವಾರ ಆಯೋಜಿಸಿದ್ದ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿನ 470 ಕೋಟಿ ರೂಪಾಯಿ ಮೌಲ್ಯದ ಕಾಮಗಾರಿಗಳ ಉದ್ಘಾಟನೆ ಮತ್ತು ಕಟ್ಟಡಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ಫಲಾನುಭವಿಗಳಿಗೆ ನೇರವಾಗಿ ಸವಲತ್ತುಗಳನ್ನು ವಿತರಿಸಿ ಅವರು ಮಾತನಾಡಿದರು.

ಸಿಎಂ ಸಿದ್ದರಾಮಯ್ಯ (ETV Bharat)

ಈ ಬಾರಿ ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 50 ಕೋಟಿ ಹಣ ಆಫರ್ ಮಾಡಿತ್ತು. ಈ ಹಣ ಎಲ್ಲಿಂದ ಬರುತ್ತೆ? ಯಡಿಯೂರಪ್ಪ, ಬೊಮ್ಮಾಯಿ, ಅಶೋಕ್ ಹಣ ಪ್ರಿಂಟ್ ಹಾಕಿದ್ದಾರಾ? ರಾಜ್ಯವನ್ನು ಲೂಟಿ ಹೊಡೆದ ಹಣ ತಾನೇ ಎಂದು ಸಿಎಂ ಪ್ರಶ್ನಿಸಿದರು.

ಸಿಬಿಐ, ಇ.ಡಿ., ಐಟಿ ಹಾಗೂ ರಾಜ್ಯಪಾಲರನ್ನು ದುರುಪಯೋಗಪಡಿಸಿಕೊಂಡು ಆಟ ಆಡ್ತೀರಾ? ಅರವಿಂದ್ ಕೇಜ್ರಿವಾಲ್ ಆಯ್ತು. ಈಗ ನನ್ನ ಮತ್ತು ನನ್ನ ಪತ್ನಿಯನ್ನು ಟಾರ್ಗೆಟ್ ಮಾಡಿದ್ದಾರೆ. ನಾನು ನಿನ್ನೆ ಮೊನ್ನೆ ಮಂತ್ರಿಯಾದವನಲ್ಲ. 40 ವರ್ಷದಿಂದ ಮಂತ್ರಿಯಾಗಿದ್ದೀನಿ. ಸುಳ್ಳು ಕೇಸಲ್ಲಿ ನನ್ನನ್ನು, ನನ್ನ ಧರ್ಮಪತ್ನಿಯನ್ನು ಎಳೀತೀರಾ? ರಾಜ್ಯದ ಜನರೇನು ಮೂರ್ಖರಾ?. ರಾಜ್ಯದ ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ನಾನು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಷಡ್ಯಂತ್ರಗಳಿಗೆ ಜಗ್ಗಲ್ಲ, ಬಗ್ಗಲ್ಲ. ನೀವೂ ಕೂಡ ಸುಖಾಸುಮ್ಮನೆ ತಂಟೆಗೆ ಬಂದರೆ ಸುಮ್ಮನಿರಲ್ಲ ಎನ್ನುವ ಎಚ್ಚರಿಕೆ ಕೊಡಬೇಕಿದೆ ಎಂದು ಜನರಿಗೆ ಕರೆ ನೀಡಿದರು.

ರಾಜ್ಯದಲ್ಲಿ ನಮ್ಮ ಐದೂ ಗ್ಯಾರಂಟಿಗಳು ಯಶಸ್ವಿಯಾಗಿ ಜಾರಿಯಾದ ಬಳಿಕ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಭಯಾನಕ ಸುಳ್ಳುಗಳನ್ನು ಹೊಸೆಯುತ್ತಿದ್ದಾರೆ. ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಹಸಿ ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಗ್ಯಾರಂಟಿಗಳಿಗಾಗಿ 56 ಸಾವಿರ ಕೋಟಿ ರೂಪಾಯಿ ಕೊಟ್ಟರೆ, ಅಭಿವೃದ್ಧಿ ಕಾರ್ಯಗಳಿಗೆ 1 ಲಕ್ಷದ 20 ಸಾವಿರ ಕೋಟಿ ರೂಪಾಯಿ ನೀಡಿದೆ. ಈಗ ನರಸೀಪುರದಲ್ಲಿ 470 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ದೊರೆತಿದೆ. ಬಿಜೆಪಿಯ ಸುಳ್ಳುಗಳಿಗೆ ಇವತ್ತಿನ ಅಭಿವೃದ್ಧಿ ಕಾರ್ಯಕ್ರಮ ಕನ್ನಡಿ ಹಿಡಿದಿದೆ ಎಂದರು.

ಬಿಜೆಪಿಯವರು ಗ್ಯಾರಂಟಿಯ ಹಣ ತೆಗೆದುಕೊಳ್ತಿಲ್ವಾ?, ಬಿಜೆಪಿಯವರು ಉಚಿತವಾಗಿ ಬಸ್ಸಿನಲ್ಲಿ ಓಡಾಡುತ್ತಿಲ್ವಾ?, ಉಚಿತ ವಿದ್ಯುತ್ ಪಡೆಯುತ್ತಿಲ್ವಾ?, ಗೃಹಲಕ್ಷ್ಮಿ ಹಣ ಪಡೆಯುತ್ತಿಲ್ವಾ?, ನಾವು ತೆಗೆದುಕೊಳ್ತಿಲ್ಲ ಅಂತ ಬಿಜೆಪಿಯವರು ಎದೆ ಮುಟ್ಟಿಕೊಂಡು ಹೇಳಲಿ ನೋಡೋಣ ಎಂದು ಸವಾಲೆಸೆದ ಸಿಎಂ, ರಾಜ್ಯ ಸರ್ಕಾರದ ಗ್ಯಾರಂಟಿ ಫಲಾನುಭವಿಗಳನ್ನು ಅವಮಾನಿಸಿ, ಅಪಪ್ರಚಾರ ಮಾಡುವುದನ್ನು ನಿಲ್ಲಿಸದಿದ್ದರೆ ಜನರು ನಿಮಗೆ ಸರಿಯಾದ ಪಾಠ ಕಲಿಸ್ತಾರೆ ಎಂದು ಎಚ್ಚರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ, ಸಂಸದ ಸುನಿಲ್ ಬೋಸ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್, ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ, ಡಾ.ತಿಮ್ಮಯ್ಯ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಹಲವು ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಮತ್ತೆ ಸವಾಲು

ABOUT THE AUTHOR

...view details