ಬೆಳಗಾವಿ: ಹಾಲು ಉತ್ಪಾದಕರಿಗೆ ನೀಡಬೇಕಾದ 716 ಕೋಟಿ ರೂ ಪ್ರೋತ್ಸಾಹಧನ ಬಾಕಿ ಉಳಿಸಿಕೊಂಡಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಬೆಳಗಾವಿ ಡಿಸಿ ಕಚೇರಿ ಮುಂಭಾಗ ಎಮ್ಮೆಗಳನ್ನು ಕರೆ ತಂದು ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪಕ್ಷದ ರಾಜ್ಯ ಉಪಾಧ್ಯಕ್ಷ ಅನಿಲ ಬೆನಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿಗೆ ಎಮ್ಮೆಗಳೊಂದಿಗೆ ಮೆರವಣಿಗೆಯ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರ, ಸಿಎಂ ಸಿದ್ದರಾಮಯ್ಯ ವಿರುದ್ದ ಘೋಷಣೆಗಳನ್ನು ಕೂಗಿದರು. ಹಾಲಿನ ಕ್ಯಾನ್ಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿ ಮಾಡಿದ ರೈತ ಪರ ಯೋಜನೆಗಳನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರದ್ದು ಮಾಡಿದೆ. ಸರ್ಕಾರದ ಧೋರಣೆಗಳಿಂದ ಜನರು ಮಾತ್ರವಲ್ಲ, ಜಾನುವಾರುಗಳೂ ಸಹ ಸಂಕಷ್ಟದಲ್ಲಿವೆ ಎಂದರು.
ಬಿಜೆಪಿ ಆಡಳಿತದಲ್ಲಿ 26 ಲಕ್ಷ ರೈತರಿಂದ ಪ್ರತಿದಿನ 80ರಿಂದ 85 ಲಕ್ಷ ಲೀಟರ್ ಹಾಲು ಸಂಗ್ರಹಿಸಲಾಗುತ್ತಿತ್ತು. ಸಿಎಂ ಯಡಿಯೂರಪ್ಪನವರು ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ನೀಡಿದ್ದರು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಪ್ರೋತ್ಸಾಹಧನ ಬಿಡುಗಡೆ ಮಾಡಿಲ್ಲ. ಆದ್ದರಿಂದ ಹಾಲಿನ ಉತ್ಪಾದನೆಯ ಪ್ರಮಾಣ 10 ಲಕ್ಷ ಲೀಟರ್ ಕುಸಿದಿದೆ. ರೈತರಿಗೆ ಬರ ಪರಿಹಾರದ ಬಾಕಿ ಹಣವನ್ನು ಶೀಘ್ರ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.