ಬೆಂಗಳೂರು: ಸರ್ಕಾರಿ ಬಸ್ ಪ್ರಯಾಣದ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ನಗರದ ಮೆಜೆಸ್ಟಿಕ್ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಬಿಜೆಪಿ ನಾಯಕರು ಇಂದು ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮುಖವಾಡ ಧರಿಸಿದ್ದ ಬಿಜೆಪಿ ಕಾರ್ಯಕರ್ತರು, ವಿನೂತನವಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಬಸ್ ನಿಲ್ದಾಣದಲ್ಲಿದ್ದ ಪುರುಷ ಪ್ರಯಾಣಿಕರಿಗೆ ಗುಲಾಬಿ ಹೂ ನೀಡಲಾಯಿತು.
ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, "ಕರ್ನಾಟಕದ 7 ಕೋಟಿ ಜನರು ಹೊಸ ವರ್ಷದ ಉಡುಗೊರೆಗಾಗಿ ಕಾಯುತ್ತಿದ್ದೆವು. ಮೋದಿಯವರು ಹೊಸ ವರ್ಷಕ್ಕೆ ನಿಜವಾದ ಉಡುಗೊರೆ ನೀಡಿದ್ದಾರೆ. ಆದರೆ, ರಾಜ್ಯ ಸರ್ಕಾರ, ದಿ ಗ್ರೇಟ್ 14 ಬಜೆಟ್ ಚಾಂಪಿಯನ್ ಸಿದ್ದರಾಮಯ್ಯನವರು ಬಸ್ ದರ ಏರಿಕೆಯ ಉಡುಗೊರೆ ನೀಡಿದ್ದಾರೆ" ಎಂದು ಟೀಕಿಸಿದರು.
"ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೇರಿದ ಬಳಿಕ ಪ್ರತಿದಿನ ತೆರಿಗೆ ಹೆಚ್ಚಿಸುವುದೇ ಸಾಧನೆ ಮಾಡುತ್ತಿದೆ. ಅಭಿವೃದ್ಧಿ ವಿಚಾರದಲ್ಲಿ ಶೂನ್ಯ ಸಾಧನೆ ಮಾಡಿರುವ ರಾಜ್ಯ ಸರ್ಕಾರ, ಬೆಲೆ ಏರಿಕೆಯನ್ನ ನಿರಂತರವಾಗಿ ಮಾಡುತ್ತಿದೆ" ಎಂದರು.
ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, "ಇದು ಹೆಣ್ಣು ಮಕ್ಕಳಿಗೆ ಉಚಿತ ಪ್ರಯಾಣ ನೀಡಿ, ಗಂಡಸರಿಗೆ ಬರೆ ಹಾಕುವ ಸರ್ಕಾರ" ಎಂದು ಟೀಕಿಸಿದರು.