ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಸ್ಟಾರ್ ಕ್ಯಾಂಪೇನರ್ಗಳ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಬಿಡುಗಡೆ ಮಾಡಿದೆ. ಬಿಜೆಪಿ ವರಿಷ್ಠ ನಾಯಕರ ಜೊತೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ 40 ನಾಯಕರ ಪಟ್ಟಿ ಬಿಡುಗಡೆ ಆಗಿದೆ. ಬಿ. ಎಲ್ ಸಂತೋಷ್ ಅವರನ್ನು ಪಟ್ಟಿಯಿಂದ ಹೊರಗಿಟ್ಟಿದ್ದು, ಬಿ. ಎಸ್ ಯಡಿಯೂರಪ್ಪ ಅಭ್ಯರ್ಥಿಗಳ ಆಯ್ಕೆಯಂತೆ ತಾರಾ ಪ್ರಚಾರಕರ ಪಟ್ಟಿಯಲ್ಲೂ ಮೇಲುಗೈ ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಪೂರ್ಣಗೊಳ್ಳುತ್ತಿದ್ದಂತೆ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ತಾರಾ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ ಜೊತೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಅಸ್ಸೋಂ ಸಿಎಂ ಹೇಮಂತ ಬಿಸ್ವಾ ಶರ್ಮ, ಗೋವಾ ಸಿಎಂ ಪ್ರಮೋದ್ ಸಾವಂತ್, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡಣವೀಸ್, ತಮಿಳುನಾಡು ರಾಜ್ಯಾಧ್ಯಕ್ಷ ಅಣ್ಣಾಮಲೈ, ಪಕ್ಷದ ಹಿರಿಯ ನಾಯಕ ಬಿ. ಎಸ್ ಯಡಿಯೂರಪ್ಪ ಸೇರಿದಂತೆ ರಾಜ್ಯದ ನಾಲ್ವರು ಮಾಜಿ ಸಿಎಂಗಳು, ಟಿಕೆಟ್ ತಪ್ಪಿಸಿಕೊಂಡ ನಳಿನ್ ಕುಮಾರ್ ಕಟೀಲ್, ಪ್ರತಾಪ್ ಸಿಂಹ, ಎ ನಾರಾಯಣಸ್ವಾಮಿ, ರೆಬೆಲ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಪ್ರೀತಂ ಗೌಡ ಸೇರಿದಂತೆ 40 ಮಂದಿ ಸ್ಟಾರ್ ಕ್ಯಾಂಪೇನರ್ಗಳಾಗಿ ಆಯ್ಕೆಯಾಗಿದ್ದಾರೆ.
ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಜೈ ಶಂಕರ್, ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ ಜೊತೆಗೆ ಬಿಜೆಪಿ ಅಭ್ಯರ್ಥಿಗಳಾಗಿರುವ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಗೋವಿಂದ ಕಾರಜೋಳ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಬಿ. ಶ್ರೀರಾಮುಲು ಕೂಡ ಸ್ಟಾರ್ ಕ್ಯಾಂಪೆನರ್ಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.