ಬೆಂಗಳೂರು :ಉದಯಗಿರಿ ಘಟನೆ ಹಿನ್ನೆಲೆಯಲ್ಲಿ ಸೋಮವಾರ ಮೈಸೂರು ಚಲೋ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಿಳಿಸಿದರು. ಜಯನಗರದಲ್ಲಿ ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಆಲಿಸಿ ಬಳಿಕ ಮಾತನಾಡಿದ ಅವರು, ನಾನು ಮೈಸೂರಿಗೆ ತೆರಳಲಿದ್ದೇನೆ. ರಾಜ್ಯ ಸರ್ಕಾರ ಕಾನೂನು- ಸುವ್ಯವಸ್ಥೆ ವಿಚಾರದಲ್ಲಿ ಸಂಪೂರ್ಣ ವಿಫಲವಾಗಿದೆ. ಉದಯಗಿರಿ ಘಟನೆ, ಪೊಲೀಸ್ ಠಾಣೆಗೆ ಪುಡಾರಿಗಳು ನುಗ್ಗಿ ದಾಂಧಲೆ ಮಾಡಿದವರನ್ನು ರಕ್ಷಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ದೂರಿದರು.
ಸರ್ಕಾರದಿಂದ ದಾಂಧಲೆ ಮಾಡಿದವರನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ದರೋಡೆ ಕೊಲೆಗಳು ನಡೆಯುತ್ತಿವೆ. ಬೆಂಗಳೂರು ಸುರಕ್ಷಿತವಾಗಿಲ್ಲ. ಇದೆಲ್ಲದಕ್ಕೂ ರಾಜ್ಯ ಸರ್ಕಾರವೇ ಹೊಣೆ ಹೊರಬೇಕು. ಗೃಹ ಸಚಿವರ ಹೇಳಿಕೆಯನ್ನು ಗಮನಿಸಿದ್ದೇನೆ. ನಾನು ರಾಜೀನಾಮೆ ಕೊಡಬೇಕೇ? ಅಥವಾ ಕೊಡುತ್ತೇನೆ ಎಂಬ ಧಾಟಿಯಲ್ಲಿ ಮಾತನಾಡಿದ್ದಾರೆ. ಇದು ಅವಿವೇಕತನದ ಪರಮಾವಧಿ. ಕಾನೂನು- ಸುವ್ಯವಸ್ಥೆ ಕಾಪಾಡಿ ಅಭಿವೃದ್ಧಿ ಮಾಡಬೇಕೆಂದು ನಿಮಗೆ ರಾಜ್ಯದ ಜನರು ಆಶೀರ್ವಾದ ಮಾಡಿದ್ದಾರೆ. ಅದನ್ನು ಮಾಡದೇ ಈ ರೀತಿ ಹೇಳಿಕೆ ನೀಡಿದರೆ ದೇಶದ್ರೋಹಿಗಳು, ಕೊಲೆಗಡುಕರಿಗೆ ಆನೆಬಲ ಬಂದಂತಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.