ಬಜೆಟ್ ಕುರಿತು ವಿಜಯೇಂದ್ರ ಮಾತು ಬೆಂಗಳೂರು:ಮುಖ್ಯಮಂತ್ರಿಗಳು ಮತ್ತು ರಾಜ್ಯದ ಹಣಕಾಸು ಸಚಿವರಾದ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ರೈತ ವಿರೋಧಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಶೂನ್ಯ ಪ್ರಗತಿಯ ಬಜೆಟ್ ಆಗಿದೆ. ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತೆಗೆದುಕೊಂಡು ಹೋಗುವ ಆಯವ್ಯಯ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ವಿಶ್ಲೇಷಿಸಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯುವಕರಿಗೆ ಯಾವುದೇ ನಿರ್ದಿಷ್ಟ ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಘೋಷಣೆ ಮಾಡಿಲ್ಲ. ಜವಾಬ್ದಾರಿಯಿಂದ ನುಣುಚಿಕೊಳ್ಳಲು ಮತ್ತು ವೈಫಲ್ಯಗಳನ್ನು ಮುಚ್ಚಿ ಹಾಕಿಕೊಳ್ಳಲು ಸಿದ್ದರಾಮಯ್ಯ ಪ್ರಯತ್ನಿಸಿದ್ದಾರೆ ಎಂದು ಟೀಕಿಸಿದರು.
ಸಿಎಂ ಬಜೆಟ್‍ನ ಪಾವಿತ್ರ್ಯತೆ ಹಾಳು ಮಾಡಿದ್ದಾರೆ ಎಂದು ಆರೋಪಿಸಿದ ಬಿಜೆಪಿ ರಾಜ್ಯಾಧ್ಯಕ್ಷ, ಅನುದಾನಕ್ಕಾಗಿ ದೆಹಲಿ ಚಲೋ ನಡೆಸಿ, ರಾಜ್ಯದ ಗೌರವವನ್ನು ಹರಾಜು ಹಾಕುವ ಕೆಲಸ ಆಗಿತ್ತು. ಇಂದು ಮುಖ್ಯಮಂತ್ರಿಗಳು ತಮ್ಮ ಬಜೆಟ್‍ನಲ್ಲಿ ಕೇಂದ್ರ ಸರ್ಕಾರವನ್ನು ದೂರುವ ಕೆಲಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉತ್ತರ ಕರ್ನಾಟಕದ ಅಭಿವೃದ್ಧಿ ಮರೀಚಿಕೆ:ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒಂದು ರೂಪಾಯಿಯನ್ನೂ ಕೊಡದ ಬಜೆಟ್ ಇದಾಗಿದೆ. ಸಂಕಷ್ಟದಲ್ಲಿರುವ ರೈತರು ಬಜೆಟ್ ಮೂಲಕ ಪರಿಹಾರದ ನಿರೀಕ್ಷೆಯಲ್ಲಿದ್ದರು. ಇದರಡಿ ಮಹಿಳೆಯರಿಗೂ ಅನುಕೂಲ ಆಗುವುದಿಲ್ಲ. ಪ್ರಣಾಳಿಕೆಯಲ್ಲಿ ನೇಕಾರರ ಬಗ್ಗೆ ಮಾತನಾಡಿದ್ದರು. ನೇಕಾರರ ಪರವಾಗಿ ಒಂದು ಯೋಜನೆಯನ್ನೂ ಘೋಷಣೆ ಮಾಡಿಲ್ಲ. ಯೋಜನೆ ಘೋಷಿಸುವುದು ಇರಲಿ, ನೇಕಾರರ ಹೆಸರನ್ನೂ ಉಲ್ಲೇಖಿಸಿಲ್ಲ ಎಂದು ವಿಜಯೇಂದ್ರ ಟೀಕಿಸಿದರು.
ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳದ ಭರವಸೆ ನೀಡಿದ್ದರು. ಅದರ ಬಗ್ಗೆಯೂ ಉಲ್ಲೇಖ ಮಾಡಿಲ್ಲ. ‘ನುಡಿದಂತೆ ನಡೆದ ಸರಕಾರ’ ಎಂದು ಕೊಚ್ಚಿಕೊಳ್ಳುತ್ತಾರೆ. ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ. ರಾಜ್ಯದ ರೈತರು, ಬಡವರು, ದೀನದಲಿತರು, ನೇಕಾರರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿ ಎಲ್ಲ ವರ್ಗಕ್ಕೂ ನಿರಾಸೆ ಮೂಡಿಸಿದ ಬಜೆಟ್ ಇದು ಎಂದು ಮೂದಲಿಸಿದರು.
ಬರಗಾಲದ ಸಂದರ್ಭದಲ್ಲೂ ಕೃಷಿ ಮತ್ತು ಬೆಳೆ ಸಾಲದ ಮನ್ನಾ ಕುರಿತು ಉಲ್ಲೇಖ ಮಾಡಿಲ್ಲ. ಸರಕಾರಿ ನೌಕರರ ಮೂಗಿಗೆ ತುಪ್ಪ ಹಚ್ಚುವ ಕೆಲಸವನ್ನು ಮಾಡಲಾಗಿದೆ. ಬರಗಾಲದ ಸಂದರ್ಭದಲ್ಲಿ ಯಾವುದೇ ರೀತಿಯ ಅನುಕೂಲ ಆಗದ ಬಜೆಟ್, ನಿಶ್ಚಿತವಾಗಿ ಇದು ಕರಾಳ ದಿನ ಎಂದರೂ ತಪ್ಪಾಗಲಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕಿಸಿದರು.
ಇದನ್ನೂ ಓದಿ:ಮಾಜಿ ದೇವದಾಸಿಯರು ಮತ್ತು ಲಿಂಗತ್ವ ಅಲ್ಪ ಸಂಖ್ಯಾತರ ಮಾಸಾಶನ ಹೆಚ್ಚಳ