ಶಿವಮೊಗ್ಗ: ವಕ್ಫ್ ವಿವಾದ ರಾಜ್ಯದಲ್ಲಿ ರಾಜಕೀಯವಾಗಿ ಭಾರಿ ಸದ್ದು ಮಾಡುತ್ತಿದೆ. ವಿರೋಧ ಪಕ್ಷ ಬಿಜೆಪಿ ರಾಜ್ಯಾದ್ಯಂತ ವಕ್ಫ್ ನೋಟಿಸ್ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿದೆ. ಶಿವಮೊಗ್ಗ ಮತ್ತು ದಾವಣಗೆರೆಯಲ್ಲಿ ಪ್ರತಿಭಟನಾ ನಿರತ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ, ಕಾಂಗ್ರೆಸ್ ಪಕ್ಷ, ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹ್ಮದ್ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನಾ ಸಭೆ ಬಳಿಕ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ, ಪೊಲೀಸರು ಶಾಸಕ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ ಸೇರಿದಂತೆ ಬಿಜೆಪಿ ಮುಖಂಡರನ್ನು ವಶಕ್ಕೆ ಪಡೆದರು.
ರೇಣುಕಾಚಾರ್ಯ ಸೇರಿ ಹಲವರು ಪೊಲೀಸ್ ವಶಕ್ಕೆ:ಮತ್ತೊಂದೆಡೆ, ದಾವಣಗೆರೆಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿ ಜಿಲ್ಲಾ ಕಚೇರಿಯಿಂದ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ರಾಜ್ಯದಲ್ಲಿ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್ ಹೆಸರಿನಲ್ಲಿ ಕಬಳಿಸುತ್ತಿರುವುದನ್ನು ವಿರೋಧಿಸಿ ಉಪ ವಿಭಾಗಾಧಿಕಾರಿ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ್, ಹೆಚ್ ಪಿ ರಾಜೇಶ್ ಸೇರಿದಂತೆ ಹಲವು ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.