ಕರ್ನಾಟಕ

karnataka

ETV Bharat / state

ಏಕರೂಪ ಶಿಕ್ಷಣ ವ್ಯವಸ್ಥೆ ಜಾರಿಗಾಗಿ ಬೋರ್ಡ್ ಪರೀಕ್ಷೆ: ಸರ್ಕಾರದ ಸಮರ್ಥನೆ

ಏಕರೂಪದ ಶಿಕ್ಷಣ ವ್ಯವಸ್ಥೆ ಜಾರಿ ಮಾಡುವ ಸಲುವಾಗಿ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿರುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್​ಗೆ ವಿವರಿಸಿದೆ.

High Court
ಹೈಕೋರ್ಟ್

By ETV Bharat Karnataka Team

Published : Mar 13, 2024, 9:13 PM IST

ಬೆಂಗಳೂರು :ರಾಜ್ಯದ ಎಲ್ಲ ಶಾಲೆಗಳಲ್ಲಿ ಏಕರೂಪದ ಶಿಕ್ಷಣ ವ್ಯವಸ್ಥೆ ಜಾರಿ ಮಾಡುವ ಸಲುವಾಗಿ ಶಿಕ್ಷಣ ಇಲಾಖೆ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿರುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್​ಗೆ ವಿವರಿಸಿದೆ.

ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆಗಳನ್ನು ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಈ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ಸೋಮಶೇಖರ್ ಮತ್ತು ರಾಜೇಶ್ ಕೆ ರೈ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರದ ಪರವಾಗಿ ವಾದ ಮಂಡಿಸಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ, ರಾಜ್ಯ ಪಠ್ಯಕ್ರಮ ಅಳವಡಿಸಿರುವ ಎಲ್ಲ ಮಕ್ಕಳಿಗೂ ಸಮಾನ ಶಿಕ್ಷಣ ವ್ಯವಸ್ಥೆ ಬೇಕಾಗಿದೆ. ಆದ್ದರಿಂದ ಶಿಕ್ಷಣ ಇಲಾಖೆ ಬೋರ್ಡ್ ಪರೀಕ್ಷೆಗೆ ಮುಂದಾಗಿದೆ ಎಂದರು.

ಅಲ್ಲದೇ, ಪರೀಕ್ಷೆಗಳು ತಮಾಷೆಯಲ್ಲ. ಮಕ್ಕಳು ಹಲವು ದಿನಗಳಿಂದ ಸಿದ್ದತೆ ಮಾಡಿಕೊಂಡಿರುತ್ತಾರೆ. ಆದರೆ, ಪರೀಕ್ಷಾ ದಿನಾಂಕಗಳನ್ನು ಮತ್ತೆ ಮತ್ತೆ ಬದಲಾವಣೆ ಮಾಡುವುದರಿಂದ ವಿದ್ಯಾರ್ಥಿಗಳಿಗೆ ತೀವ್ರ ತರಹದ ಗೊಂದಲಗಳಿಗೆ ಕಾರಣವಾಗುತ್ತಿದೆ. ಜತೆಗೆ ರಾಜ್ಯ ಶಿಕ್ಷಣ ಇಲಾಖೆಗೆ ಆರ್​ಟಿಐ ಕಾಯಿದೆಯಡಿ ಪರೀಕ್ಷೆಗಳನ್ನು ಮಾಡುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಕಳೆದ ವರ್ಷವೂ ಆರ್​ಟಿಐ ಕಾಯಿದೆಯಡಿ ಸುತ್ತೋಲೆ ಹೊರಡಿಸಿ ಪರೀಕ್ಷೆಗಳನ್ನು ಹಮ್ಮಿಕೊಳ್ಳಲಾಗಿತ್ತು ಎಂದು ವಿವರಿಸಿದರು. ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ನಾಳೆಗೆ (ಗುರುವಾರಕ್ಕೆ) ಮಂದೂಡಿದೆ.

ಪ್ರಕರಣದ ಹಿನ್ನೆಲೆ ಏನು? : ಕರ್ನಾಟಕ ಶಿಕ್ಷಣ ಕಾಯಿದೆಯಡಿ ರಾಜ್ಯ ಶಿಕ್ಷಣ ಇಲಾಖೆ 2023ರ ಅಕ್ಟೋಬರ್ 6 ಮತ್ತು 9 ರಂದು ಎರಡು ಸುತ್ತೋಲೆಗಳನ್ನ ಹೊರಡಿಸಿ 5 , 8, 9 ಮತ್ತು 11 ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿದಾರರ‌ ಸಂಘಗಳು, ಸರ್ಕಾರದ ಸುತ್ತೋಲೆ ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ ಸೆಕ್ಷನ್ 30 ಮತ್ತು ಕರ್ನಾಟಕ ಶಿಕ್ಷಣ ಕಾಯಿದೆಯ ವಿವಿಧ ಸೆಕ್ಷನ್​ಗಳ ಉಲ್ಲಂಘನೆಯಾಗಿದ್ದು, ಬೋರ್ಡ್ ಪರೀಕ್ಷೆ ರದ್ದುಪಡಿಸಬೇಕು ಎಂದು ಕೋರಿದ್ದರು.

ಈ ಅರ್ಜಿಗಳ ವಿಚಾರಣೆ ನಡೆಸಿದ್ದ ಏಕ ಸದಸ್ಯ ಪೀಠ, ಶಿಕ್ಷಣ ಇಲಾಖೆ ಸುತ್ತೋಲೆಗಳನ್ನು ರದ್ದುಪಡಿಸಿ ಆದೇಶಿಸಿತ್ತು. ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ದ್ವಿ ಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ವಿಚಾರಣೆ ನಡೆಸಿದ್ದ ದ್ವಿಸದಸ್ಯ ಪೀಠ, ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿತ್ತು. ಇದನ್ನು ಅರ್ಜಿದಾರರು ಸುಪ್ರೀಂಕೋರ್ಟ್​ಗೆ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು. ದ್ವಿಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದ್ದ ಸುಪ್ರೀಂಕೋರ್ಟ್ ದ್ವಿ ಸದಸ್ಯ ಪೀಠದ ಮುಂದೆ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಆದಷ್ಟು ಶೀಘ್ರವಾಗಿ ವಿಚಾರಣೆ ನಡೆಸಿ, ಸೂಕ್ತ ಆದೇಶ ನೀಡುವಂತೆ ಸೂಚನೆ ನೀಡಿತ್ತು.

ಇದನ್ನೂ ಓದಿ :5, 8, 9 ಮತ್ತು 11 ತರಗತಿ ಬೋರ್ಡ್ ಪರೀಕ್ಷೆ ರದ್ದು: ಆದೇಶ ಪ್ರಶ್ನಿಸಿ ದ್ವಿಸದಸ್ಯ ಪೀಠದ ಮೊರೆ ಹೋದ ಸರ್ಕಾರ

ABOUT THE AUTHOR

...view details