ಬೆಂಗಳೂರು:ಕಾವೇರಿ 5ನೇ ಹಂತದ ಕುಡಿಯುವ ನೀರಿನ ಸಂಪರ್ಕ ನೀಡುವ ನಿಟ್ಟಿನಲ್ಲಿ ಮಧ್ಯವರ್ತಿಗಳ ಹಸ್ತಕ್ಷೇಪ ತಡೆಗಟ್ಟಿ, ವ್ಯವಸ್ಥೆಯನ್ನು ಸರಳೀಕರಣಗೊಳಿಸಿ ಜನರ ಮನೆ ಬಾಗಿಲಿಗೆ ತೆರಳಿ ಕಾವೇರಿ ಕುಡಿಯುವ ನೀರಿನ ಸಂಪರ್ಕ ನೀಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರ್ದೇಶನ ನೀಡಿದ್ದಾರೆ. ಈ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿಯಿಂದ ಮನೆ ಮನೆಗೂ ಕಾವೇರಿ ನೀರು ಸಂಪರ್ಕ ಅಭಿಯಾನ ಪ್ರಾರಂಭಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೃಹತ್ ಬೆಂಗಳೂರಿನ 110 ಹಳ್ಳಿಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸುವ ಯೋಜನೆಯಾದ ಕಾವೇರಿ 5 ಹಂತವನ್ನು ಅಕ್ಟೋಬರ್ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೋಕಾರ್ಪಣೆಗೊಳಿಸಿದ್ದರು. ಈ ಯೋಜನೆಯ ಅನುಷ್ಠಾನದಿಂದ ನಗರಕ್ಕೆ 775 ಎಂ.ಎಲ್.ಡಿಯಷ್ಟು ಹೆಚ್ಚುವರಿ ನೀರು ಲಭ್ಯವಾಗುತ್ತಿದೆ.
ಕಾವೇರಿ ಕುಡಿಯುವ ನೀರಿನ ಹೊಸ ಸಂಪರ್ಕಗಳನ್ನು ಪಡೆಯಲು ಈಗಾಗಲೇ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ಆದರೆ ಕೆಲವು ಕಡೆಗಳಲ್ಲಿ ಮಧ್ಯವರ್ತಿಗಳ ಹಸ್ತಕ್ಷೇಪದ ಬಗ್ಗೆ ದೂರುಗಳು ಕೇಳಿಬಂದಿವೆ. ಅಲ್ಲದೇ, ಆನ್‌ಲೈನ್ ಅರ್ಜಿ ಸಲ್ಲಿಕೆಯ ಬಗ್ಗೆ ಹಲವು ಗೊಂದಲಗಳ ಬಗ್ಗೆ ಗ್ರಾಹಕರು ಗಮನ ಸೆಳೆದಿದ್ದರು. ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿ ಹೊಸದಾಗಿ ಕುಡಿಯುವ ನೀರಿನ ಸಂಪರ್ಕ ಪಡೆಯುವ ವ್ಯವಸ್ಥೆಯನ್ನು ಸರಳೀಕರಣಗೊಳಿಸಿ, ಮಧ್ಯವರ್ತಿಗಳ ಹಸ್ತಕ್ಷೇಪವನ್ನು ತಪ್ಪಿಸುವ ನಿಟ್ಟಿನಲ್ಲಿ ಜನರ ಮನೆ ಬಾಗಿಲಿಗೆ ತೆರಳಿ ಕಾವೇರಿ ಕುಡಿಯುವ ನೀರಿನ ಸಂಪರ್ಕ ನೀಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರ್ದೇಶನ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.