ಬೆಂಗಳೂರು:ನಗರದಲ್ಲಿ ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡುವುದನ್ನು ನಿಷೇಧಿಸಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(ಬಿಡಬ್ಲ್ಯೂಎಸ್‌ಎಸ್‌ಬಿ) ಆದೇಶ ಹೊರಡಿಸಿದೆ. ಈ ಆದೇಶ ಉಲ್ಲಂಘಿಸಿದ್ದಲ್ಲಿ ದಂಡ ವಿಧಿಸಲಾಗುವುದು ಎಂದು ತಿಳಿಸಿದೆ.
"ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು 34ರ ಅನುಸಾರ ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು ವಾಹನಗಳ ಸ್ವಚ್ಛತೆ, ಕೈದೋಟ, ಕಟ್ಟಡ ನಿರ್ಮಾಣ, ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆ, ಸಿನಿಮಾ ಮಂದಿರ ಮತ್ತು ಮಾಲ್ಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರ ಬಳಕೆ, ರಸ್ತೆ ನಿರ್ಮಾಣ ಮತ್ತು ಸ್ವಚ್ಛತೆಗೆ ಬಳಸದಂತೆ ನೀಷೇಧಿಸಲಾಗಿದೆ" ಎಂದು ಬಿಡಬ್ಲ್ಯೂಎಸ್‌ಎಸ್‌ಬಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾದ್ ಮನೋಹರ್ ಆದೇಶದಲ್ಲಿ ತಿಳಿಸಿದ್ದಾರೆ.
"ಈ ಆದೇಶ ಉಲ್ಲಂಘನೆ ಮಾಡುವವರ ವಿರುದ್ಧ ಜಲಮಂಡಳಿಯ ಕಾಯ್ದೆ 1964ರ ಕಲಂ 109ರಂತೆ 5,000 ರೂಪಾಯಿಗಳ ದಂಡ ವಿಧಿಸಲಾಗುವುದು. ಉಲ್ಲಂಘನೆ ಮರುಕಳಿಸಿದಲ್ಲಿ ದಂಡದ ಮೊತ್ತದ ಜೊತೆಗೆ ಹೆಚ್ಚುವರಿಯಾಗಿ ಪ್ರತಿದಿನಕ್ಕೆ 500 ರೂಪಾಯಿ ದಂಡ ಹಾಕಲಾಗುವುದು" ಎಂದು ಎಚ್ಚರಿಕೆ ನೀಡಿದ್ದಾರೆ.