ಬೆಂಗಳೂರು: "ಸಿಎಂ ಸಿದ್ದರಾಮಯ್ಯನವರೇ, ಬಹುಶಃ ನಿಮ್ಮ ಶಾಸಕರ ಮೇಲೆ ನೀವು ವಿಶ್ವಾಸವನ್ನು ಕಳೆದುಕೊಂಡಂತೆ ಕಾಣುತ್ತಿದೆ. ಅದಕ್ಕಾಗಿಯೇ ₹50 ಕೋಟಿಗೆ ಅವರು ಮಾರಾಟವಾಗುತ್ತಿದ್ದಾರೆ ಎಂಬ ಕಪೋಲಕಲ್ಪಿತ ಆರೋಪ ಮಾಡುತ್ತಿದ್ದೀರಿ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, "ಇದು ನೀವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾಗೂ ಶಾಸಕರನ್ನು ಮಾರಾಟದ ವಸ್ತುಗಳಂತೆ ವ್ಯಾಖ್ಯಾನಿಸಿ ಅವರಿಗೆ ಮಾಡುತ್ತಿರುವ ಅವಮಾನವಾಗಿದೆ. ನಿಮ್ಮ ಈ ಹೇಳಿಕೆ ಕಾಂಗ್ರೆಸ್ ಶಾಸಕರುಗಳನ್ನು ಅಂಕೆಯಲಿಟ್ಟುಕೊಳ್ಳಲು ಹಾಗೂ ನಿಮ್ಮನ್ನು ಸುತ್ತುವರೆದಿರುವ ಭ್ರಷ್ಟಾಚಾರದ ಹಗರಣಗಳನ್ನು ಮುಚ್ಚಿಕೊಳ್ಳಲು ಹೆಣೆದಿರುವ ಹತಾಶೆಯ ಸುಳ್ಳಿನ ಕಂತೆ ಎನ್ನುವುದು ಕನಿಷ್ಠ ರಾಜಕೀಯ ಜ್ಞಾನ ಇರುವವರಿಗೂ ಅರಿವಾಗುತ್ತದೆ" ಎಂದು ವಾಗ್ದಾಳಿ ನಡೆಸಿದ್ದಾರೆ.
"ಸುಳ್ಳು, ಭಂಡತನ, ಕಪೋಲಕಲ್ಪಿತ ಸುದ್ದಿಗಳನ್ನು ಹರಿಬಿಡುವುದು ನಿಮ್ಮ ಹಾಗೂ ನಿಮ್ಮ ಪಕ್ಷದ ನಿತ್ಯ ಮಂತ್ರವಾಗಿದೆ. ನೀವು ನಡೆಸಿರುವ ಸರಣಿ ಹಗರಣಗಳ ಹಿನ್ನೆಲೆಯ ಉರುಳು ಬಿಗಿಯಾಗುತ್ತಿರುವಷ್ಟು ನಿದ್ದೆಗೆಡುತ್ತಿರುವ ನಿಮ್ಮ ಮನಸ್ಸು ಅಸ್ಥಿರಗೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಚಲಿತ ಬೆಳವಣಿಗೆಯನ್ನು ವಿಚಲಿತಗೊಳಿಸುವುದು ಹೇಗೆ ಎಂಬುದರತ್ತಲೇ ನೀವು ನಿಗಾ ಇಟ್ಟಿರುವಂತೆ ಕಾಣುತ್ತಿದೆ" ಎಂದು ಟೀಕಿಸಿದ್ದಾರೆ.
"ಮುಖ್ಯಮಂತ್ರಿಯಂತಹ ಜವಾಬ್ದಾರಿ ಸ್ಥಾನದಲ್ಲಿ ಕುಳಿತಿರುವ ನೀವು ಅದರ ಘನತೆಯನ್ನು ಕುಗ್ಗಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದೀರಿ, ನಿಮ್ಮದೇ ಸರ್ಕಾರವಿದೆ, ನಿಮ್ಮದೇ ತನಿಖಾ ಸಂಸ್ಥೆಗಳಿವೆ. 50 ಕೋಟಿ ರೂ. ಆಮಿಷದ ಮೂಲ ಯಾವುದು ಎನ್ನುವುದನ್ನು ಜನರ ಮುಂದೆ ಬಹಿರಂಗಪಡಿಸುವುದು ನಿಮ್ಮ ನೈತಿಕ ಜವಾಬ್ದಾರಿಯಾಗಿರುತ್ತದೆ. ಇಲ್ಲದಿದ್ದರೆ ನಿಮ್ಮ ಹೇಳಿಕೆ ಬಾಲಿಶ ರಾಜಕೀಯ ಹೇಳಿಕೆಯಾಗುತ್ತದೆಯಷ್ಟೆ".