ಬೆಂಗಳೂರು:ಕಸ್ತೂರಿ ರಂಗನ್ ನೀಡಿರುವ ವರದಿಯಿಂದ ಪಶ್ಚಿಮಘಟ್ಟ ವ್ಯಾಪ್ತಿಯ ಗ್ರಾಮಗಳ ಜನರಿಗೆ ಹಾನಿಯಾಗದಂತೆ ವರದಿಯನ್ನು ರಾಜ್ಯದ ಪರವಾಗಿ ತಿರಸ್ಕರಿಸುವುದು ಸೇರಿದಂತೆ ಮೂರು ರೀತಿಯ ಪ್ರಸ್ತಾವನೆಗಳನ್ನು ಮುಂದಿನ ಸಚಿವ ಸಂಪುಟ ಸಭೆ ಮುಂದೆ ಮಂಡಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಜನಪ್ರತಿನಿಧಿಗಳ ಅಭಿಪ್ರಾಯ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಸಲಾಗಿದೆ. ಈ ಸಂದರ್ಭದಲ್ಲಿ ಕಸ್ತೂರಿ ರಂಗನ್ ವರದಿಯಿಂದ ಸ್ಥಳೀಯ ನಿವಾಸಿಗಳಿಗೆ ಅನ್ಯಾಯ ಆಗುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಹಾಗಾಗಿ, ಕಸ್ತೂರಿ ರಂಗನ್ ವರದಿಯನ್ನು ರಾಜ್ಯದಿಂದ ಸಂಪೂರ್ಣ ತಿರಸ್ಕರಿಸಬೇಕು. ಇಲ್ಲದಿದ್ದರೆ ಕಸ್ತೂರಿ ರಂಗನ್ ವರದಿ ಆಧರಿಸಿ ರಾಜ್ಯ ವ್ಯಾಪ್ತಿಯಲ್ಲಿನ ಪಶ್ಚಿಮಘಟ್ಟ ಅರಣ್ಯ ಪ್ರದೇಶದಲ್ಲಿ 20,668 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವನ್ನು ಘೋಷಿಸುವಂತೆ ಕೇಂದ್ರ ಸರ್ಕಾರ ಪ್ರಕಟಿಸಿರುವ ಅಧಿಸೂಚನೆ ಬದಲಿಗೆ, ಈಗಾಗಲೇ ನಿಗದಿಪಡಿಸಿರುವ 16,114 ಚ.ಕಿ.ಮೀ. ಭೂಮಿಯನ್ನು ಮಾತ್ರ ಪರಿಸರ ಸೂಕ್ಷ್ಮ ವಲಯ ಎಂದು ಪರಿಗಣಿಸಬೇಕು ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ.