ಬೆಂಗಳೂರು:ಸಚಿವ ಶಿವಾನಂದ ಎಸ್. ಪಾಟೀಲ್ ದಾಖಲಿಸಿದ್ದ ಮಾನನಷ್ಟ ಪ್ರಕರಣ ಸಂಬಂಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ನಗರದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಸೆಕ್ಷನ್ 223 ಅಡಿಯಲ್ಲಿ ಜಾರಿಗೊಳಿಸಿದ್ದ ನೋಟಿಸ್‌ನ್ನು ಹೈಕೋರ್ಟ್ ರದ್ದುಪಡಿಸಿದೆ. ಅಲ್ಲದೆ, ಹೊಸದಾಗಿ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.
ಶಿವಾನಂದ ಪಾಟೀಲ್ ಅವರ ಖಾಸಗಿ ದೂರು ಪರಿಗಣಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾರಿಗೊಳಿಸಿದ್ದ ನೋಟಿಸ್ ರದ್ದುಪಡಿಸುವಂತೆ ಕೋರಿ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ನೀಡಿದೆ.
ಪ್ರಕರಣದಲ್ಲಿ ಯತ್ನಾಳ್ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 156ರ ಅಡಿಯಲ್ಲಿ ವಿಶೇಷ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ಅದನ್ನು ವಿಚಾರಣೆಗೆ ಅಂಗೀಕರಿಸಿದ್ದ ವಿಶೇಷ ನ್ಯಾಯಾಲಯ, ಬಿಎನ್‌ಎಸ್‌ಎಸ್ ಸೆಕ್ಷನ್ 223 ಅಡಿಯಲ್ಲಿ ಯತ್ನಾಳ್ ಅವರಿಗೆ ನೇರವಾಗಿ ನೋಟಿಸ್ ಜಾರಿ ಮಾಡಿತ್ತು.
ಅದನ್ನು ಆಕ್ಷೇಪಿಸಿರುವ ಹೈಕೋರ್ಟ್, ಬಿಎನ್‌ಎಸ್‌ಎಸ್ ಸೆಕ್ಷನ್ 223ರ ಪ್ರಕಾರ ಖಾಸಗಿ ದೂರನ್ನು ದಾಖಲಿಸಿಕೊಳ್ಳುವ ಮೊದಲಿಗೆ ಮ್ಯಾಜಿಸ್ಟ್ರೇಟ್, ಆರೋಪಿಗೆ ದೂರಿನ ಪ್ರತಿ, ಎಫ್‌ಐಆರ್, ದೂರುದಾರರ ಮತ್ತು ಸಾಕ್ಷಿಯ ಸ್ವಯಂ ಹೇಳಿಕೆ ಹಾಗೂ ಪೂರಕ ದಾಖಲೆಗಳನ್ನು ಒದಗಿಸಬೇಕು. ಬಳಿಕ ಅವರ ಅವಹಾಲು ಆಲಿಸಬೇಕು. ಆ ನಂತರವೇ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆಗೆ ಮುಂದಾಗಬೇಕು. ಅದು ಬಿಟ್ಟು ನೇರವಾಗಿ ಕಾಗ್ನಿಜೆನ್ಸ್ (ಪ್ರಕರಣವನ್ನು ವಿಚಾರಣೆಗೆ ಪರಿಗಣಿಸುವ ಪ್ರಕ್ರಿಯೆ) ತೆಗೆದುಕೊಂಡು ನೇರವಾಗಿ ನೋಟಿಸ್ ಜಾರಿ ಮಾಡಲು ಅವಕಾಶವಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.