ಬೆಂಗಳೂರು:ಲೋಕಸಭೆ ಚುನಾವಣೆಗೆ ನಡೆದ ಮತದಾನದ ಮತ ಎಣಿಕೆ ಇನ್ನೂ ಸ್ವಲ್ಪ ಹೊತ್ತಲ್ಲೇ ಆರಂಭವಾಗಲಿದೆ. ಚುನಾವಣೆಗೆ ಸ್ಪರ್ಧೆ ಮಾಡಿದ್ದ ಹಲವಾರು ಅಭ್ಯರ್ಥಿಗಳು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಕಳೆದ 2023ರ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಲೋಕಸಭೆ ಚುನಾವಣೆಯಲ್ಲಿಯಾದರೂ ತಮಗೆ ಗೆಲುವು ದಕ್ಕಬಹುದಾ ? ಎಂದು ಮತ ಎಣಿಕೆ ಫಲಿತಾಂಶವನ್ನು ಕಾತರದಿಂದ ಎದುರು ನೋಡುತ್ತಿದ್ದಾರೆ.
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ವಿಧಾನಸಭೆ ಚುನಾವಣೆಯಲ್ಲಿ ಸೋತವರನ್ನೂ ತಮ್ಮ ಅಭ್ಯರ್ಥಿಗಳನ್ನಾಗಿ ಕಣಕ್ಕಿಳಿಸಿವೆ ಅವರನ್ನು ಜನಪ್ರತಿನಿಧಿಗಳನ್ನಾಗಿ ಆಯ್ಕೆ ಮಾಡಲು ಅವಕಾಶ ನೀಡಿವೆ. ಸಂಸತ್ ಚುನಾವಣೆಗೆ ಸ್ಪರ್ಧೆ ಮಾಡಿರುವ ವಿಧಾನಸಭೆ ಚುನಾವಣೆಯ ಪರಾಜಿತ ಅಭ್ಯರ್ಥಿಗಳು ಇಂದಿನ ಲೋಕಸಭೆ ಚುನಾವಣೆ ಮತ ಎಣಿಕೆ ಸಂದರ್ಭದಲ್ಲಿ ತಮಗೆ ವಿಜಯಲಕ್ಷ್ಮಿ ಒಲಿಯಬಹುದು ಎನ್ನುವ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಬಿಜೆಪಿಯು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಒಟ್ಟು 6 ಜನ ಅಭ್ಯರ್ಥಿಗಳನ್ನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಿ ಅಭ್ಯರ್ಥಿಗಳನ್ನಾಗಿ ಕಣಕ್ಕಿಳಿಸಿದೆ. ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ಚಿತ್ರದುರ್ಗ ಕ್ಷೇತ್ರದಲ್ಲಿ, ಮಾಜಿ ಸಚಿವ ವಿ ಸೋಮಣ್ಣ ಅವರನ್ನು ತುಮಕೂರು ಕ್ಷೇತ್ರದಲ್ಲಿ, ಮಾಜಿ ಸಚಿವ ಡಾ.ಕೆ ಸುಧಾಕರ್ ಅವರನ್ನು ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಬೆಳಗಾವಿ ಕ್ಷೇತ್ರದಲ್ಲಿ, ಮಾಜಿ ಸಚಿವ ಶ್ರೀರಾಮುಲು ಅವರನ್ನು ಬಳ್ಳಾರಿ ಕ್ಷೇತ್ರದಲ್ಲಿ , ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಉತ್ತರ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನಾಗಿ ನಿಲ್ಲಿಸಿದೆ. ಶಾಸಕ ಸ್ಥಾನಕ್ಕೆ ನಡೆದ ಮತದಾನದಲ್ಲಿ ಅಭ್ಯರ್ಥಿಗಳಾಗಿ ಸ್ಪರ್ಧಿಸಿ ಫೇಲಾಗಿದ್ದ ಇವರು ಲೋಕಸಭೆ ಚುನಾವಣೆಯಲ್ಲಿ ಪಾಸಾಗಿ ಸಂಸತ್ ಭವನ ಪ್ರವೇಶಿಸಲು ಇಂದಿನ ಫಲಿತಾಂಶವನ್ನು ಎದುರು ನೋಡುತ್ತಿದ್ದಾರೆ.
ಕಾಂಗ್ರೆಸ್ ಪಕ್ಷವು ಸಹ ಕಳೆದ 2023 ರ ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದ ಅಭ್ಯರ್ಥಿಗಳಿಗೆ ಲೋಕಸಭೆ ಚುನಾವಣೆ ಟಿಕೆಟ್ ನೀಡಿ ಸ್ಪರ್ಧೆಗಿಳಿಸಿದೆ. ಸಚಿವ ರಾಮಲಿಂಗಾರೆಡ್ಡಿ ಅವರ ಮಗಳಾದ ಸೌಮ್ಯರೆಡ್ಡಿ ಅವರನ್ನು ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಲ್ಲಿ, ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಅವರನ್ನು ಉತ್ತರ ಕನ್ನಡ ಕ್ಷೇತ್ರದಲ್ಲಿ, ಮಾಜಿ ಸಂಸದ ಪುಟ್ಟಸ್ವಾಮಿ ಗೌಡ ಅವರ ಮೊಮ್ಮಗ ಶ್ರೇಯಸ್ ಪಟೇಲ್ ಅವರನ್ನು ಹಾಸನ ಲೋಕಸಭೆ ಕ್ಷೇತ್ರದಿಂದ ಚುನಾವಣೆಗೆ ನಿಲ್ಲಿಸಿದೆ. ಇವರೆಲ್ಲರೂ ಈ ಬಾರಿಯ ಸಂಸತ್ ಚುನಾವಣೆಯಲ್ಲಿ ವಿಜಯಿಯಾಗಿ ಸಂಸದರಾಗುವ ಅಭಿಲಾಶೆ ಹೊಂದಿದ್ದಾರೆ.