ಬೆಂಗಳೂರು : ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿರುವ ಸಂದರ್ಭದಲ್ಲಿ ಪತ್ನಿ ಮತ್ತು ಮಗುವಿಗೆ ಜೀವನಾಂಶ ನೀಡುವುದರಿಂದ ತಪ್ಪಿಸಿಕೊಳ್ಳುವಂತಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.
ಮಹಾರಾಷ್ಟ್ರದ ನಾಸಿಕ್ನಲ್ಲಿ ವಾಸಿಸುತ್ತಿರುವ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅರ್ಜಿದಾರರು ಹೆಂಡತಿ ಮತ್ತು ಮಗುವನ್ನು ಮತ್ತೆ ವೈವಾಹಿಕ ಮನೆಗೆ ಕರೆದೊಯ್ಯಲು ಸಾಧ್ಯವಿಲ್ಲ. ಆದ್ದರಿಂದ, ಪತಿಯು ಹೆಂಡತಿ ಮತ್ತು ಮಗುವನ್ನು ಮರಳಿ ಬಯಸದಿದ್ದರೆ, ವೈವಾಹಿಕ ಹಕ್ಕುಗಳನ್ನು ಮರುಸ್ಥಾಪಿಸುವ ಆದೇಶವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ ಎಂಬ ಕಾರಣ ನೀಡಿದ್ದಾರೆ. ಆದ್ದರಿಂದ ಜೀವನಾಂಶ ಪಾವತಿ ಮಾಡುವುದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪೀಠ ತಿಳಿಸಿದೆ.
ಕೌಟುಂಬಿಕ ದೌರ್ಜನ್ಯ ಪ್ರಕರಣ ಸಂಬಂಧ ನ್ಯಾಯಾಲಯದ ಆದೇಶದಂತೆ ಜೀವನಾಂಶ ಪಾವತಿಸುವುದು ಕಡ್ಡಾಯವಾಗಲಿದೆ. ಜೀವನಾಂಶ ಪಾವತಿ ಮಾಡುವಂತೆ ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಯಾವುದೇ ದೋಷ ಕಂಡು ಬಂದಿಲ್ಲ ಎಂದು ತಿಳಿಸಿದ ನ್ಯಾಯಪೀಠ ಜೀವನಾಂಶ ನೀಡುವಂತೆ ಸೂಚನೆ ನೀಡಿ, ಪತಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.