ಕರ್ನಾಟಕ

karnataka

ETV Bharat / state

ಹಾಲವರ್ತಿ ಘಟನೆ ಸಹಿಸಲ್ಲ, ಕ್ರಮಕ್ಕೆ ಡಿಸಿ ಎಸ್ಪಿಗೆ ಸೂಚನೆ: ಸಚಿವ ಶಿವರಾಜ್ ತಂಗಡಗಿ

ದಲಿತರಿಗೆ ಹೋಟೆಲ್ ಪ್ರವೇಶ ನಿಷೇಧಿಸಿರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.

ಸಚಿವ ಶಿವರಾಜ್ ತಂಗಡಗಿ
ಸಚಿವ ಶಿವರಾಜ್ ತಂಗಡಗಿ

By ETV Bharat Karnataka Team

Published : Feb 15, 2024, 9:06 AM IST

ಬೆಂಗಳೂರು: ಕೊಪ್ಪಳ ಜಿಲ್ಲೆಯ ಹಾಲವರ್ತಿ ಗ್ರಾಮದಲ್ಲಿ ದಲಿತರಿಗೆ ಹೋಟೆಲ್ ಪ್ರವೇಶ ನಿಷೇಧ ಮಾಡಿದ್ದಾರೆ ಎನ್ನುವುದನ್ನು ಸಹಿಸಲು ಸಾಧ್ಯವಿಲ್ಲ. ಸಂಬಂಧಪಟ್ಟವರ ವಿರುದ್ಧ ಕೂಡಲೇ ಕ್ರಮ ಜರುಗಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಾಲವರ್ತಿ ಗ್ರಾಮದಲ್ಲಿನ ಘಟನೆ ನನ್ನ ಗಮನಕ್ಕೆ ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಭೇಟಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.‌ ನಾನು ಒಬ್ಬ ದಲಿತ ಮಂತ್ರಿಯಾಗಿದ್ದು, ಇದನ್ನು ಸಹಿಸಲು ಸಾಧ್ಯವಿಲ್ಲ. ಈ ಸಂಬಂಧ ಅಲ್ಲಿನ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಜಾಗೃತಿ ಬಳಿಕವೂ ಅದೇ ರೀತಿ ಮುಂದುವರೆದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.

ಕೂಡಲೇ ಗ್ರಾಮಸ್ಥರೊಂದಿಗೆ ಸಭೆ ನಡೆಸುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಜಿಲ್ಲೆಯಲ್ಲಿ ಇಂತಹ ಪ್ರಕರಣ ಮತ್ತೊಮ್ಮೆ ‌ಮರುಕಳಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.‌

ಇದನ್ನೂ ಓದಿ: ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಹೆಚ್ಚಾಗಬೇಕು: ಸಿಎಂ

ಕೊಪ್ಪಳ ಜಿಲ್ಲಾ ಕೇಂದ್ರದ ಪಕ್ಕದಲ್ಲೇ ಇರುವ ಹಾಲವರ್ತಿ ಗ್ರಾಮದಲ್ಲಿ ಇನ್ನೂ ಕೂಡ ಅಸ್ಪೃಶ್ಯತೆ ತಾಂಡವವಾಡುತ್ತಿದೆ. ಈ ಗ್ರಾಮದಲ್ಲಿ ದಲಿತರಿಗೆ ಹೋಟೆಲ್ ಮತ್ತು ಕ್ಷೌರದ ಅಂಗಡಿಗೆ ಪ್ರವೇಶ ಇರಲಿಲ್ಲ. ಗ್ರಾಮದ ಯುವಕರು ಇದನ್ನು ಖಂಡಿಸಿ, ಹೋಟೆಲ್ ಮತ್ತು ಕ್ಷೌರದ ಅಂಗಡಿ ಮಾಲೀಕರನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಗ್ರಾಮ ಪಂಚಾಯತ್​ ಬಳಿ ಪ್ರತಿಭಟಟನೆ ನಡೆಸಿ ಆಕ್ರೋಶ ಹೊರಹಾಕಿದರು.

ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾಹಿತಿ ಕಲೆ ಹಾಕುತ್ತಿದ್ದಾರೆ. ಹೋಟೆಲ್ ಮತ್ತು ಕ್ಷೌರದ ಅಂಗಡಿ ಮಾಲೀಕರನ್ನು ಅಧಿಕಾರಿಗಳು ವಿಚಾರಿಸಿದರು. ಇಂದು ಈ ಕುರಿತು ಅಧಿಕಾರಿಗಳು ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ:ದಲಿತ ಯುವಕನ ಮೇಲೆ ಹಲ್ಲೆ ಪ್ರಕರಣ: ದೇವಾಲಯದ ಬೀಗ ಒಡೆದು ರಂಗನಾಥನಿಗೆ ಪೂಜೆ

ಸಿಎಂ ಸಿದ್ದರಾಮಯ್ಯ:ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ ಎಂದು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ತಿಳಿಸಿದ್ದರು.

ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಟ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ದೋಷಾರೋಪ ಪಟ್ಟಿ ಸಲ್ಲಿಕೆಯಾಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದರು. ದಲಿತರ ವಿರುದ್ಧದ ಅಪರಾಧಗಳಿಗೆ ಶಿಕ್ಷೆ ಪ್ರಮಾಣ ಕಡಿಮೆ ಇತ್ತು, ಈಗ ಸ್ವಲ್ಪ ಹೆಚ್ಚಿದೆ. ಆದರೆ ಆ ವಿಚಾರದಲ್ಲಿ ರಾಷ್ಟ್ರದ ಸರಾಸರಿಗಿಂತ ರಾಜ್ಯದಲ್ಲಿ ಹೆಚ್ಚಾಗಬೇಕು ಎಂದು ಸೂಚಿಸಿದ್ದರು.

ABOUT THE AUTHOR

...view details