ಮಂಗಳೂರು: ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ, ಮಾರಾಟ ಮಾಡುತ್ತಿದ್ದ ಕೇರಳದ ಇಬ್ಬರು ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಶಾಜಹಾನ್.ಪಿ.ಎಂ(32), ಮುಹಮ್ಮದ್ ನಿಶಾದ್(27) ಮತ್ತು ಕೊಡಗುವಿನ ಮನ್ಸೂರು ಎಂ.ಎಂ(27) ಬಂಧಿತರು. ಇವರನ್ನು ಬಂಧಿಸಿ 42 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಖರೀದಿಸಿಕೊಂಡು ಕಾರಿನಲ್ಲಿ ಸಾಗಾಟ, ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ನಗರದ ಸುರತ್ಕಲ್ ಎನ್ಐಟಿಕೆ ಮುಕ್ಕ ಪರಿಸರದಲ್ಲಿ ಅಕ್ರಮವಾಗಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆ ಹಚ್ಚಲಾಗಿದ್ದು, ಕಾರಿನಲ್ಲಿದ್ದ 2,10,000 ರೂ ಮೌಲ್ಯದ 42 ಗ್ರಾಂ ನಿಷೇಧಿತ ಮಾದಕ ವಸ್ತು, 5 ಮೊಬೈಲ್, ಹೊಸ ಕಾರು, ಡಿಜಿಟಲ್ ತೂಕ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 12,18,500 ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.