ಬೆಳಗಾವಿ: ಡಿ.26, 27ರಂದು ಎರಡು ದಿನ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ಸೇರಿ ಹಲವು ನಾಯಕರು ಆಗಮಿಸಲಿದ್ದಾರೆ. ಈ ಎಲ್ಲಾ ನಾಯಕರು ಎರಡು ದಿನ ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಒಂದು ಐತಿಹಾಸಿಕ ಪುಟಕ್ಕೆ ಸೇರುತ್ತಿದೆ. ಮಹಾತ್ಮ ಗಾಂಧೀಜಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿ ನೂರು ವರ್ಷ ಆಗುತ್ತಿದೆ. ಅದಾದ ಮೇಲೆ ಈಗ ನಮ್ಮ ರಾಜ್ಯದ ಮಲ್ಲಿಕಾರ್ಜುನ ಖರ್ಗೆ ಅವರು ಆ ಸ್ಥಾನದಲ್ಲಿ ಕುಳಿತಿದ್ದಾರೆ. ಹಾಗಾಗಿ, ಒಂದು ಹೊಸ ಮುನ್ನುಡಿ ಬರೆಯಲು ನಾವು ಹೊರಟಿದ್ದೇವೆ ಎಂದರು.
ಡಿ.26ರಂದು ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಶಾಸಕಾಂಗ ಪಕ್ಷದ ಎಲ್ಲ ನಾಯಕರು, ಕಾಂಗ್ರೆಸ್ ಅಧಿಕಾರದಲ್ಲಿರುವ ಎಲ್ಲ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಸಾಯಂಕಾಲ ಬಂದಿರುವ ಅತಿಥಿಗಳಿಗೆ ಮುಖ್ಯಮಂತ್ರಿಗಳು ಔತಣಕೂಟ ಏರ್ಪಡಿಸಲಿದ್ದಾರೆ ಎಂದು ತಿಳಿಸಿದರು.
ಮಾರನೇ ದಿನ 27ರಂದು ಬೆಳಗಾವಿಯ ಸಿಪಿಇಎಡ್ ಮೈದಾನದಲ್ಲಿ ಬೆಳಿಗ್ಗೆ 11 ಗಂಟೆಗೆ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿದೆ. ಜನಪ್ರತಿನಿಧಿಗಳು, ಗೆದ್ದವರು, ಸೋತವರು, ಸಾರ್ವಜನಿಕರನ್ನು ಸೇರಿ ಎಲ್ಲರನ್ನು ಆಹ್ವಾನಿಸುತ್ತಿದ್ದೇವೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಅವತ್ತು ನೂರು ಕಡೆ ಕಾಂಗ್ರೆಸ್ ಕಚೇರಿಯನ್ನು ಉದ್ಘಾಟನೆ ಮಾಡಬೇಕು ಎಂದು ಸಿದ್ಧತೆ ಆಗಿದೆ. ಇನ್ನು ಸೋಮವಾರ ಅಥವಾ ಮಂಗಳವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ ಆಗಮಿಸುತ್ತಿದ್ದು, ಕಾರ್ಯಕ್ರಮ ಸ್ಥಳ, ಸಿದ್ಧತೆ ಪರಿಶೀಲಿಸಿ, ಮಾರ್ಗದರ್ಶನ ನೀಡಲಿದ್ದಾರೆ ಎಂದರು.