- ಚಾಮರಾಜನಗರ:ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರವನ್ನು ಒಳಗೊಂಡಿರುವ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಮುಗಿದಿದೆ. ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜು ಸೋಲು ಕಂಡಿದ್ದಾರೆ. ಪ್ರತಿಸ್ಪರ್ಧಿ ಸುನೀಲ್ ಬೋಸ್ ಭರ್ಜರಿ ಗೆಲುವು ಸಾಧಿಸಿದ್ದಾರೆ.
- ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ಗೆ ಗೆಲುವು -7,48,885ಮತಗಳು.
- ಬಿಜೆಪಿ ಅಭ್ಯರ್ಥಿ ಬಾಲರಾಜುಗೆ ಸೋಲು -5,59,942ಮತಗಳು.
- ಗೆಲುವಿನ ಅಂತರ -1,88,943 ಮತಗಳು.
ಈ ಮೀಸಲು (ಎಸ್ಸಿ) ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಎಸ್.ಬಾಲರಾಜು, ಕಾಂಗ್ರೆಸ್ನಿಂದ ಸಚಿವ ಹೆಚ್.ಸಿ. ಮಹದೇವಪ್ಪ ಪುತ್ರ ಸುನಿಲ್ ಬೋಸ್ ಹುರಿಯಾಳಾಗಿದ್ದು, ಉಭಯ ನಾಯಕರು ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮತದಾರರ ಗಮನ ಸೆಳೆದಿದ್ದರು. ಸಿದ್ದರಾಮಯ್ಯ ವರ್ಚಸ್ಸಿನ ನಡುವೆ ಜಂಗಿಕುಸ್ತಿಯಿಂದಾಗಿ ಚಾಮರಾಜನಗರ ಹೈವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಟ್ಟಿತ್ತು. ಇದೀಗ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ 7,48,885 ಮತಗಳೊಂದಿಗೆ ಗೆಲುವು ಸಾಧಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳು ಹಾಗೂ ಮೈಸೂರು ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳೂ ಸೇರಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳು ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡುತ್ತವೆ. ಕಾಂಗ್ರೆಸ್ನ 7 ಹಾಗೂ ಜೆಡಿಎಸ್ನ ಓರ್ವ ಶಾಸಕರು ಕ್ಷೇತ್ರದಲ್ಲಿದ್ದಾರೆ. ಲೋಕಸಭಾ ಕಣದಲ್ಲಿ ಒಟ್ಟು 14 ಅಭ್ಯರ್ಥಿಗಳಿದ್ದರು. ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. ಎರಡು ಬಾರಿ ಸಂಸದರಾಗಿದ್ದ ಆರ್. ಧ್ರುವನಾರಾಯಣ ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಹಿರಿಯ ರಾಜಕಾರಣಿ ವಿ. ಶ್ರೀನಿವಾಸ ಪ್ರಸಾದ್ ಎದುರು ಸೋತಿದ್ದರು. ಇದರಿಂದಾಗಿ ಚಾಮರಾಜನಗರದಲ್ಲಿ ಮೊದಲ ಬಾರಿಗೆ ಕಮಲ ಅರಳಿತ್ತು.