ಕರ್ನಾಟಕ

karnataka

By ETV Bharat Karnataka Team

Published : Jun 24, 2024, 6:26 PM IST

ETV Bharat / state

ಅಂಗನವಾಡಿಗಳಲ್ಲೇ ಎಲ್​ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಹಮತ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ - LKG UKG IN ANGANWADIS

ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Minister-lakshmi-hebbalkar
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (ETV Bharat)

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (ETV Bharat)

ಬೆಂಗಳೂರು :ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚಿಸಿದ್ದಾರೆ ಎಂದು ಸಚಿವರು ಹೇಳಿದರು.

ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದ್ದು, ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಇಲಾಖೆಯ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಶಾಲೆಗಳ ಮಾದರಿಯಲ್ಲೇ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮವಹಿಸಲಾಗುವುದು ಎಂದರು.

ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿಯೇ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯೂ ಸರ್ಕಾರಿ ಮಾಂಟೆಸರಿ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ‌ ಹಿನ್ನೆಲೆ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ ಎಂದು ಹೇಳಿದರು.

ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವ ಸಂಬಂಧ ಈಗಾಗಲೇ ಅಂಗನವಾಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಾಗಿದೆ. ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಶಿಕ್ಷಕಿಯರ ಪೈಕಿ 9 ಸಾವಿರ ಮಂದಿ ಪದವಿ ಪಡೆದವರಾಗಿದ್ದರೆ, ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಮಂದಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹೀಗಾಗಿ, ಗುಣಮಟ್ಟದ ಶಿಕ್ಷಣ ನೀಡಿಕೆಗೆ ಯಾವುದೇ ಸಮಸ್ಯೆ ಆಗದು ಎಂದು ಹೇಳಿದ ಸಚಿವರು, ಯಾರನ್ನೂ ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆಯಲ್ಲಿ ಶಾಲಾ ಮತ್ತು ಪ್ರಾಥಮಿಕ ಶಿಕ್ಷಣದ ಸಚಿವ ಮಧು ಬಂಗಾರಪ್ಪ‌, ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ :ಅಂಗನವಾಡಿ ಕೇಂದ್ರಗಳ ಅಸ್ತಿತ್ವಕ್ಕೆ ಧಕ್ಕೆಯಾಗದಂತೆ ಕ್ರಮ: ಸಚಿವರ ಭರವಸೆಯಿಂದ ಮುಷ್ಕರ ಹಿಂಪಡೆದ ಕಾರ್ಯಕರ್ತೆಯರು - Anganwadi Workers protest

ABOUT THE AUTHOR

...view details